Pahalgam Attack: ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಏಕಾಏಕಿ ದಾಳಿ ಮಾಡಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ಉಗ್ರರ ಹೀನ ಕೃತ್ಯಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಮುಂದಾಗಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದು ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಿದ್ದಾರೆ ಎಂದು ವರದಿಯಾಗಿದೆ.
ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ವಾಯುಪಡೆ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಭಾಗವಹಿಸಿದ್ದರು.

ಸಶಸ್ತ್ರ ಪಡೆಗಳಿಗೆ ಸ್ವಾತಂತ್ರ್ಯ
ಭಯೋತ್ಪಾದನೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಸಾಮರ್ಥ್ಯದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಯಾವುದೇ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸ್ವಾತಂತ್ರ್ಯವಿದೆ ಎಂದು ಹೇಳಿದರು.
ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಸರ್ಕಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಪ್ರಧಾನಿ ಅಧ್ಯಕ್ಷತೆಯ ಭದ್ರತೆಯ ಕುರಿತಾದ ಸಂಪುಟ ಸಮಿತಿ ಸಭೆ ಸೇರಲು ಒಂದು ದಿನ ಮುಂಚಿತವಾಗಿ ಈ ಸಭೆ ನಡೆದಿದೆ.
ಕಠಿಣ ಕ್ರಮದ ಎಚ್ಚರಿಕೆ
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ ಮನ್ ಕಿ ಬಾತ್ ಭಾಷಣದಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗುತ್ತದೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ, ದಾಳಿ ಮಾಡಿದವರಿಗೆ ಮತ್ತು ಅದಕ್ಕೆ ಕುಮ್ಮಕ್ಕು ಕೊಟ್ಟವರಿಗೆ ಕಠಿಣ ಶಿಕ್ಷೆ ಸಿಗುತ್ತದೆ ಎಂದರು.
ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ದಾಳಿಯನ್ನು ಪ್ರಾರಂಭಿಸಿದ ಭಾರತ, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿದೆ. ಅಟ್ಟಾರಿಯಲ್ಲಿ ಗಡಿಯನ್ನು ಮುಚ್ಚಿದೆ. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ.












Click it and Unblock the Notifications