ಮರುಪರೀಕ್ಷೆಗೆ ಆಗ್ರಹ: ಬಿಹಾರದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್
ಬಿಹಾರದಲ್ಲಿ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯ (ಸಿಸಿಇ) ಮರುಪರೀಕ್ಷೆಗೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳ ಪ್ರತಿಭಟನೆ ನಡೆಸುತ್ತಿದ್ದು ಇಂದು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಜಲಫಿರಂಗಿ ಪ್ರಯೋಗ ಮಾಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸಕ್ಕೆ ತೆರಳಲು ನಿರ್ಧರಿಸಿದ ಸಾವಿರಾರು ವಿದ್ಯಾರ್ಥಿಗಳು ಗಾಂಧಿ ಮೈದಾನದಲ್ಲಿ ಒಟ್ಟುಗೂಡಿದ್ದರು. ಆದರೆ ಪೊಲೀಸರು ಇದಕ್ಕೆ ಅನುಮತಿ ನೀಡಿರಲಿಲ್ಲ. ಬಿಪಿಎಸ್‌ಸಿ ಆಕಾಂಕ್ಷಿಗಳು ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಜಲಫಿರಂಗಿ ಕೂಡ ಪ್ರಯೋಗಿಸಲಾಗಿದೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ ಸೋಮವಾರ 'ಚಕ್ಕಾ ಜಾಮ್'ಗೆ ಕರೆ ನೀಡಿದ್ದು, ಸೋಮವಾರ ಪ್ರತಿಭಟನೆ ಕಾವು ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.
ಪ್ರಶಾಂತ್ ಕಿಶೋರ್ ಬೆಂಬಲ
ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ನಿರ್ದಿಷ್ಟ ನಿರ್ಧಾರಕ್ಕೆ ಬರದಿದ್ದರೆ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮುಂದುವರೆಸುತ್ತಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಐದು ಸದಸ್ಯರ ವಿದ್ಯಾರ್ಥಿ ನಿಯೋಗವು ತಮ್ಮ ಬೇಡಿಕೆಗಳನ್ನು ಮಂಡಿಸಲು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಬಹುದು ಎಂದು ಹೇಳಿದರು. ಆದರೆ ವಿದ್ಯಾರ್ಥಿಗಳು ಮುಖ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಲು ಒಪ್ಪಿಗೆ ನೀಡಲಿಲ್ಲ. ಪ್ರತಿಭಟನಾ ಸ್ಥಳದಿಂದ ಹೊರಬರಲು ವಿದ್ಯಾರ್ಥಿಗಳು ನಿರಾಕರಿಸಿದರು. ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಇದ್ದಾಗ ಕಿಶೋರ್ ಗಾಂಧಿ ಮೈದಾನಕ್ಕೆ ಮರಳಿದರು. ಗಾಂಧಿ ಜಯಂತಿ ಅಂಗವಾಗಿ ಶನಿವಾರ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚಿಸಿ ಮುಂದಿನ ಕಾರ್ಯತಂತ್ರ ರೂಪಿಸಲು 'ಛತ್ರ ಸಂಸದ್'ಗೆ ಕರೆ ನೀಡಿದ್ದರು. ಆದರೆ ನಗರಾಡಳಿತ ವಿದ್ಯಾರ್ಥಿಗಳ ಸಭೆಗೆ ಅನುಮತಿ ನೀಡಲು ನಿರಾಕರಿಸಿದೆ.
ಕಳೆದ 10 ದಿನಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಪು ಪರೀಕ್ಷಾ ಪರಿಸರ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪ ಕೇಳಿಬಂದ ಬಳಿಕ ವಿದ್ಯಾರ್ಥಿಗಳು ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ ಈಗ ನಡೆದಿರುವ 70ನೇ ಸಿಸಿಇ ಪರೀಕ್ಷೆಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಬಿಪಿಎಸ್‌ಸಿ ಪರೀಕ್ಷಾ ನಿಯಂತ್ರಕ ರಾಜೇಶ್ ಕುಮಾರ್ ಸಿಂಗ್ ಸಮರ್ಥನೆ ನೀಡಿದ್ದಾರೆ. ಏಪ್ರಿಲ್‌ನಲ್ಲಿ ನಿಗದಿಯಂತೆ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದರು.












Click it and Unblock the Notifications