ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದ ಪ್ರಲ್ಹಾದ್ ಜೋಶಿಗೆ ಕೇಂದ್ರ ಶಿಕ್ಷಣ ಸಚಿವ ಹುದ್ದೆಯ ಜವಾಬ್ದಾರಿ
Pralhad Joshi: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಹಾಗೂ ಸಂಸದ ಪ್ರಲ್ಹಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಕಾರಣವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ಇದೀಗ ಮಹತ್ವದ ಹಂತಕ್ಕೆ ತಲುಪಿದೆ. ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಜನರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಡೀ ದೇಶದ ಕಣ್ಣು ಪ್ರಲ್ಹಾದ್ ಜೋಶಿ ಮೇಲೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದು, ಇದರ ಬೆನ್ನಲ್ಲೇ ಇವರ ಜವಾಬ್ದಾರಿಯನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ. ಇದೀಗ ಇಡೀ ದೇಶದ ಕಣ್ಣು ಜೋಶಿ ಅವರ ಮೇಲಿದೆ ಎನ್ನಲಾಗಿದೆ.
ಜಂತರ್ ಮಂತರ್‌ನಲ್ಲಿ ತೀವ್ರಗೊಂಡಿದ್ದ ಪ್ರತಿಭಟನೆ
ಕಳೆದ ಕೆಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ಯುವಜನರು ನೀಟ್ ಅಕ್ರಮ ಖಂಡಿಸಿ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದ ವಿರುದ್ಧ ಕಠಿಣ ಕ್ರಮ ಹಾಗೂ ವ್ಯವಸ್ಥಿತ ಬದಲಾವಣೆಗೆ ಒತ್ತಾಯಿಸಿ ನಡೆದ ಈ ಸುದೀರ್ಘ ಚಳವಳಿ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿತ್ತು.
ಪ್ರತಿಭಟನೆಯ ತೀವ್ರಗೊಳ್ಳುತ್ತಿದ್ದಂತೆ ಧರ್ಮೇಂದ್ರ ಪ್ರಧಾನ್, 'ಯಾವುದೇ ಕಾರಣಕ್ಕೂ ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಭವಿಷ್ಯವು ಕಾನೂನು ಸಂಕಷ್ಟಗಳಲ್ಲಿ ಸಿಲುಕಬಾರದು ಮತ್ತು ಈ ಪರಿಸ್ಥಿತಿಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗ ಪಡಿಸಿಕೊಳ್ಳಬಾರದು,' ಎಂಬ ಉದ್ದೇಶದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ ಸುದೀರ್ಘ ಪತ್ರದಲ್ಲಿ ತಮಗೆ ಸಿಕ್ಕ ಅವಕಾಶ ಹಾಗೂ ಮಾರ್ಗದರ್ಶನಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರಸ್ತುತ ಕೇಂದ್ರ ಆಹಾರ, ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಅವರಿಗೆ ಈ ಹೆಚ್ಚುವರಿ ಹುದ್ದೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವರಾಗಿ ಈ ಹಿಂದೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಜೋಶಿ ಅವರಿಗೆ ಈಗ ಶಿಕ್ಷಣ ಕ್ಷೇತ್ರದ ಸವಾಲುಗಳನ್ನು ಎದುರಿಸುವ ದೊಡ್ಡ ಜವಾಬ್ದಾರಿ ಹೆಗಲೇರಿದೆ.
ಜೋಶಿ ಮುಂದಿರುವ ಪ್ರಮುಖ ಸವಾಲುಗಳು
* ನೀಟ್ ಅಕ್ರಮದಿಂದಾಗಿ ನಿರಾಶೆಗೊಂಡಿರುವ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲೆ ಮರಳಿ ವಿಶ್ವಾರ ಬರಿಸುವುದು.
* ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಾರ್ಯವೈಖರಿಯಲ್ಲಿ ಪಾರದರ್ಶಕ ಬದಲಾವಣೆ ತರುವುದು.
* ದೇಶಾದ್ಯಂತ ವಿದ್ಯಾರ್ಥಿಗಳ ಅಸಮಾಧಾನವನ್ನು ಶಮನಗೊಳಿಸಿ, ಶೈಕ್ಷಣಿಕ ವೇಳಾಪಟ್ಟಿ ಸರಿಯಾಗಿ ಸಾಗುವಂತೆ ನೋಡಿಕೊಳ್ಳುವುದು.
ಕೇಂದ್ರ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಪ್ರಹ್ಲಾದ್ ಜೋಶಿ ಅವರು ಕೈಗೊಳ್ಳುವ ನಿರ್ಧಾರಗಳ ಮೇಲೆ ಈಗ ಇಡೀ ದೇಶದ ಗಮನ ನೆಟ್ಟಿದೆ. ಪರೀಕ್ಷಾ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಯಾವ ರೀತಿಯ ಹೊಸ ಕಠಿಣ ನಿಯಮಗಳನ್ನು ತರಲಿದೆ ಹಾಗೂ ವಿದ್ಯಾರ್ಥಿ ಸಮುದಾಯದ ಬೇಡಿಕೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications
