ಚುನಾವಣಾ ಸಮೀಕ್ಷೆ; ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಅಧಿಕಾರ
ಭೋಪಾಲ್, ನವೆಂಬರ್ 07; ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು.
230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದ್ದು, ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ.

ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ಚುನಾವಣಾ ಸಮೀಕ್ಷೆಯನ್ನು ನಡೆಸುತ್ತಿವೆ. Manorama News-VMR ನಡೆಸಿದ ಚುನಾವಣಾ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಪ್ರತಿಪಕ್ಷವಾದ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.
ಯಾವ ಪಕ್ಷಕ್ಕೆ ಎಷ್ಟು ಸೀಟು?; Manorama News-VMR ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷ 120-130 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. 2018ರ ಚುನಾವಣೆಯಲ್ಲಿ ಪಕ್ಷ 114 ಸ್ಥಾನಗಳಲ್ಲಿ ಜಯಗಳಿಸಿತ್ತು.
ಮಧ್ಯಪ್ರದೇಶ ರಾಜ್ಯದ ಆಡಳಿತ ಪಕ್ಷ ಬಿಜೆಪಿ ಚುನಾವಣೆಯಲ್ಲಿ 95-105 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರರು 3-7 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಸಮೀಕ್ಷೆ ಅಂದಾಜಿಸಿದೆ. ನವೆಂಬರ್ 17ರಂದು ಮತದಾನ ನಡೆಯಲಿದೆ. ಆದರೆ ಚುನಾವಣಾ ಫಲಿತಾಂಶ ಪ್ರಕಟವಾಗಲು ಡಿಸೆಂಬರ್ 3ರ ತನಕ ಕಾಯಬೇಕಿದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಶೇ 42.11, ಬಿಜೆಪಿ ಶೇ 40.3, ಇತರರು ಶೇ 17.59ರಷ್ಟು ಮತಗಳಿಕೆ ಮಾಡಲಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಶೇ 40.89, ಬಿಜೆಪಿ ಶೇ 41.02, ಇತರರು ಶೇ 18.09ರಷ್ಟು ಮತಗಳನ್ನು ಪಡೆದಿದ್ದರು.
ಪ್ರತಿಪಕ್ಷ ಕಾಂಗ್ರೆಸ್ ಪ್ರಕಾರ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಅಲ್ಲದೇ ಕರ್ನಾಟಕದ ಮಾದರಿಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಆದ್ದರಿಂದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ಪಡೆಯಲಿದೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳಲ್ಲಿ ಜಯಗಳಿಸಿದರೂ ಸಹ ಇತರರ ಬೆಂಬಲದಿಂದ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದರು. ಸುಮಾರು ಒಂದೂವರೆ ವರ್ಷದ ಬಳಿಕ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಿದ್ದರು.
ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಬಿಜೆಪಿ ಈ ಬಾರಿ 95-105 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಪ್ರಧಾನಿ ನರೇಂದ್ರ ಮೋದಿಯನ್ನು ಕರೆತಂದು ಬಿಜೆಪಿ ಬಿರುಸಿನ ಪ್ರಚಾರವನ್ನು ಮಾಡುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಪಕ್ಷ ಚುನಾವಣೆಯನ್ನು ಎದುರಿಸುತ್ತಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಬಂಡಾಯದ ಬಿಸಿಯನ್ನು ಎದುರಿಸುತ್ತಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ ಕಾರಣಕ್ಕೆ 39 ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಕಮಲ್ ನಾಥ್ ಆದೇಶ ಹೊರಡಿಸಿದ್ದಾರೆ.
ಈ ಬಾರಿಯ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಿಎಸ್‌ಪಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಳಿದಂತೆ ಟಿಕೆಟ್ ಸಿಗದ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.












Click it and Unblock the Notifications