ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪೂರಿ ಮತ್ತು ಸಿಹಿತಿಂಡಿ ತಯಾರಿ
ದೆಹಲಿ ಜೂನ್ 4: ಇಂದು ಬೆಳಿಗ್ಗೆ 8 ಗಂಟೆಯಿಂದ ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ಹೊತ್ತಿದೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ವಿಚಾರ ಗೊತ್ತಾಗಲಿದೆ. ಅದಾಗಲೇ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಹೌದು.. ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಕಾರ್ಯಕರ್ತರಲ್ಲಿ ಗೆಲುವಿನ ಉತ್ಸಾಹ ಎದ್ದು ಕಾಣುತ್ತಿದೆ. ಈ ಉತ್ಸಾಹವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೋಡಬಹುದು. ಮತ ಎಣಿಕೆಗೂ ಮುನ್ನವೇ ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪೂರಿ, ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತಿದೆ.

ಈ ನಡುವೆ ದೆಹಲಿಯ ಚಾಂದಿನಿ ಚೌಕ್‌ನ ಬಿಜೆಪಿ ಅಭ್ಯರ್ಥಿ ಪ್ರವೀಣ್ ಖಂಡೇಲ್‌ವಾಲ್, ನಾವು ಚಾಂದಿನಿ ಚೌಕ್ ಕ್ಷೇತ್ರದಲ್ಲಿ ದಾಖಲೆಯ ಮತಗಳಿಂದ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯ ಎಲ್ಲಾ ಏಳು ಸ್ಥಾನಗಳನ್ನು ಬಿಜೆಪಿ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇದೇ ಗೆಲುವಿನ ಉತ್ಸಾಹದಲ್ಲಿ ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿಹಿ ತಿಂಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು. 7 ಹಂತಗಳಲ್ಲಿ ನಡೆದ ಚುನಾವಣೆಯ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ಕಾತರದಿಂದ ಕಾಯುತ್ತಿದೆ.

ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ನಡೆದಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಆದರೆ, ಇಂದು ನಡೆಯುವ ಮತ ಎಣಿಕೆಯೊಂದಿಗೆ ಈ ಎಲ್ಲಾ ಪ್ರಕ್ರಿಯೆಗಳೂ ಮುಕ್ತಾಯ ಕಾಣಲಿವೆ.
ಈಗಾಗಲೇ ಬಹುತೇಕ ಎಲ್ಲ ಮತದಾನೋತ್ತರ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವ ಭವಿಷ್ಯ ನುಡಿದಿವೆ. ಒಂದು ವೇಳೆ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದದ್ದೇ ಆದಲ್ಲಿ ಹೊಸದೊಂದು ದಾಖಲೆ ನಿರ್ಮಾಣವಾಗಲಿದೆ.

ಸತತ ಮೂರನೇ ಬಾರಿಗೆ ಪ್ರಧಾನಿಯಾದ ಜವಾಹರ ಲಾಲ್ ನೆಹರು ಅವರ ದಾಖಲೆಯನ್ನು ಮೋದಿ ಸರಿಗಟ್ಟಲಿದ್ದಾರೆ. ಇದೇ ರೀತಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಗೆದ್ದರೆ, ಪ್ರಧಾನಿ ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ದಾಖಲೆಯೂ ಆಗಬಹುದು.
#WATCH | Poori and sweets being prepared at the BJP headquarters in Delhi ahead of the Lok Sabha election results .
— ANI (@ANI) June 4, 2024
Vote counting for #LokSabhaElections to begin at 8 am. pic.twitter.com/XkrSIua7uF
ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ 272 ಸ್ಥಾನಗಳು ಬೇಕು.
ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆ ಶುರುವಾಗಲಿದೆ. ಇದಕ್ಕೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತದೆ. ದೇಶದೆಲ್ಲೆಡೆ ಮತ ಎಣಿಕಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉನ್ನತ ದರ್ಜೆಯ ಅಧಿಕಾರಿಗಳು ಭದ್ರತೆಯ ಮೇಲ್ವಿಚಾರಣೆ ಹೊತ್ತಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸುಮಾರು 70 ರಿಂದ 80 ಲಕ್ಷ ಚುನಾವಣಾ ಸಿಬ್ಬಂದಿ ಪಾಲ್ಗೊಂಡಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications