Jammu & Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯವಾಗಿದೆ. ದಶಕಗಳ ಬಳಿಕ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದಿದ್ದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದೆ.
ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. "ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಿರುವ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾದ, ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ 31 ನೇ ಅಕ್ಟೋಬರ್, 2019 ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ನೇಮಕದ ಮೊದಲು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ" ಎಂದು ಗೆಜೆಟ್‌ನಲ್ಲಿ ತಿಳಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ್ದಾರೆ.

ಈ ಆದೇಶದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಸುಲಭವಾಗಲಿದೆ. ಇಂದು ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಭರ್ಜರಿ ಗೆಲುವು ಸಾಧಿಸಿರುವ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆಗೆ ಸಜ್ಜಾಗಿದ್ದು, ಎನ್‌ಸಿ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ.
2019ರಿಂದ ರಾಷ್ಟ್ರಪತಿ ಆಡಳಿತ
ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು & ಕಾಶ್ಮೀರ, ಲಡಾಕ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಿದ ಬಳಿಕ ಅಕ್ಟೋಬರ್ 31, 2019ರಿಂದ ರಾಷ್ಟ್ರಪತಿ ಆಡಳಿತವನ್ನು ಜಾರಿ ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಅನ್ನು ಆಗಸ್ಟ್ 5, 2019 ರಂದು ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ಕೂಡ ರದ್ದುಗೊಳಿಸಲಾಗಿತ್ತು. 2017ರಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಸರ್ಕಾರಕ್ಕೆ ಬಿಜೆಪಿ ಬೆಂಬಲ ವಾಪಸ್ ಪಡೆದ ಬಳಿಕ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಪ್ತಿ ರಾಜೀನಾಮೆ ಕೊಟ್ಟಿದ್ದರು.
ಒಮರ್ ಅಬ್ದುಲ್ಲಾ ಮುಖ್ಯಮಂತ್ರಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಪಡೆದಿರುವ ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ನ್ಯಾಷನಲ್ ಕಾನ್ಫರೆನ್ಸ್‌ಗೆ 4 ಪಕ್ಷೇತರ ಶಾಸಕರು ಹಾಗೂ ಎಎಪಿಯ ಓರ್ವ ಶಾಸಕ ಬೆಂಬಲ ನೀಡಿದ್ದಾರೆ.
ಪ್ರಮಾಣ ವಚನ ಸಮಾರಂಭ ಮತ್ತು ಸರ್ಕಾರ ರಚನೆಗೆ ದಿನಾಂಕ ನಿಗದಿ ಮಾಡಲು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಈಗಾಗಲೇ ಎನ್‌ಸಿ ಮನವಿ ಮಾಡಿದ್ದು, ದಿನಾಂಕ ನಿಗದಿ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರದ ಆಡಳಿತ ಶುರುವಾಗಲಿದೆ.












Click it and Unblock the Notifications