Priyanka Gandhi: ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ?; ಅಜ್ಜಿ ಸ್ಪರ್ಧಿಸಿ ಗೆದ್ದಿದ್ದ ಕ್ಷೇತ್ರದಿಂದಲೇ ಅದೃಷ್ಟ ಪರೀಕ್ಷೆ
ಸದ್ಯ ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದ್ದು, ಸತತ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಇತ್ತ ಕಾಂಗ್ರೆಸ್ ಮತ್ತು ಈ ಬಾರಿ ಹೇಗಾದರೂ ಮಾಡಿ ಸರ್ಕಾರ ರಚಿಸಲು ಎದುರು ನೋಡುತ್ತಿದ್ದಾರೆ.
ಇನ್ನು ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮೂರೂ ಪಕ್ಷಗಳ ಅಭ್ಯರ್ಥಿಗಳು ಮತ್ತು ನಾಯಕರು ಗೆಲುವಿಗಾಗಿ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ರಾಜ್ಯ ನಾಯಕರಲ್ಲದೇ ರಾಷ್ಟ್ರೀಯ ನಾಯಕರೂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಂಚರಿಸುತ್ತಿದ್ದಾರೆ.

ಬಿಜೆಪಿ ಪರ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ಪರ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಣದೀಪ್ ಸುರ್ಜೇವಾಲ ಸೇರಿದಂತೆ ಹಲವರು ಪ್ರಚಾರ ನಡೆಸುತ್ತಿದ್ದಾರೆ.
ತೆಲಂಗಾಣ ರಾಜ್ಯದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ
ಇನ್ನು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿಬರುತ್ತಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಆದರೆ, ಈವರೆಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ. ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಯೋಚಿಸುತ್ತಿದೆ.

ಅಜ್ಜಿ ಸ್ಪರ್ಧಿಸಿ ಗೆದ್ದಿದ್ದ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರಾ ಪ್ರಿಯಾಂಕಾ?
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು 1980ರಲ್ಲಿ ಆಗಿನ ಆಂಧ್ರಪ್ರದೇಶದ ಮೇದಕ್ (ತೆಲಂಗಾಣ) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಅವರ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಅಜ್ಜಿ ನಡೆದ ಹಾದಿಯಲ್ಲಿಯೇ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ.
ಈಗ ತೆಲಂಗಾಣದ ಭಾಗವಾಗಿರುವ ಮೇದಕ್ ಅಥವಾ ಮೆಹಬೂಬ್ ನಗರ ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ.
1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಆ ಬಳಿಕ 1978ರಲ್ಲಿ ಕರ್ನಾಟಕದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ರಾಜಕೀಯ ಮರುಜನ್ಮ ಪಡೆದಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಅನಂತರ 1980ರಲ್ಲಿ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ತೆಲಂಗಾಣದ ಮೇದಕ್ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು.

2024ರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮೇದಕ್ ಅಥವಾ ಮೆಹಬೂಬ್ ನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಬಳಿಕ ತೆಲಂಗಾಣದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವ ಪಕ್ಷ ನೂತನ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.












Click it and Unblock the Notifications