ಎಐಸಿಸಿ ಅಧ್ಯಕ್ಷೀಯ ಚುನಾವಣೆ : ಡಿ.4ರಂದು ರಾಹುಲ್ ನಾಮಪತ್ರ
ಬೆಂಗಳೂರು, ನವೆಂಬರ್ 29 : ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಯಾಗುವುದು ಖಚಿತವಾಗಿದೆ. ಅಧ್ಯಕ್ಷೀಯ ಚುನಾವಣೆಗೆ ಡಿಸೆಂಬರ್ 4ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಡಿಸೆಂಬರ್ 4ರ ಸೋಮವಾರ ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಎಐಸಿಸಿ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವ ಕುರಿತು ಈಗಾಗಲೇ ಭಾರೀ ಚರ್ಚೆ ನಡೆಯುತ್ತಿದೆ. ಸೋನಿಯಾ ಗಾಂಧಿ ಅವರು ರಾಹುಲ್‌ಗೆ ಅಧ್ಯಕ್ಷ ಪಟ್ಟವನ್ನು ಬಿಟ್ಟುಕೊಡುತ್ತಿದ್ದಾರೆ. ಈ ಕುರಿತು ದೇಶಾದ್ಯಂತ ಪರ-ವಿರೋಧ ಚರ್ಚೆ ನಡೆಯುತ್ತಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟವಾದ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.
2017ರ ಅಂತ್ಯದೊಳಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ಭರವಸೆ ನೀಡಿದೆ.
ನವೆಂಬರ್ 20ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.
ಅಂದಹಾಗೆ ಅಧ್ಯಕ್ಷೀಯ ಚುನಾವಣೆಗೆ ಡಿಸೆಂಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ಡಿಸೆಂಬರ್ 4 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಡಿಸೆಂಬರ್ 16ರಂದು ಮತದಾನ ನಡೆಯಲಿದ್ದು, 18ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.












Click it and Unblock the Notifications