Karnataka By Election: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಹೈಕಮಾಂಡ್ ನಿಂದ ಸಿದ್ದರಾಮಯ್ಯಗೆ ಭಾರೀ ಪ್ರಶಂಸೆ
ನವದೆಹಲಿ, ನವೆಂಬರ್ 29: ಕರ್ನಾಟಕದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅಭಿನಂಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ನಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭಾರೀ ಪ್ರಶಂಸೆ ಸಿಕ್ಕಿದೆ.
ಇಂದು(ಶುಕ್ರವಾರ) ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಈ ವೇಳೆ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.

ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸೀರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.












Click it and Unblock the Notifications