Rahul Gandhi: ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ, ಯುವಕರ ಬಂಧನ ಹೇಡಿತನ: ರಾಹುಲ್ ಗಾಂಧಿ ಆಕ್ರೋಶ
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಪ್ರತಿಭಟನೆ ನಡೆಸುವುದು ಅಪರಾಧವಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕ್ರಮ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಕ್‌ರೋಚ್ ಜನತಾ ಪಾರ್ಟಿ (CJP) ಸಹ ಸಂಚಾಲಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಬೆನ್ನಲ್ಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆಯ ವೇಳೆ ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ. ಅದಕ್ಕಾಗಿ ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕೃತ್ಯ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ವಿದ್ಯಾರ್ಥಿಗಳು, ಯುವಕರು, ಪತ್ರಕರ್ತರು ಮತ್ತು ಇಂಡಿಯಾ ಮೈತ್ರಿಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬೇರೆ ಬೇರೆ ಬ್ಯಾನರ್‌ಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಅವರೆಲ್ಲರ ಉದ್ದೇಶ ಒಂದೇ ಆಗಿದೆ. ನಾಗರಿಕರು ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಕೇಳುತ್ತಿದ್ದಾರೆ. ಜಂತರ್ ಮಂತರ್ ಭಾರತದ ಜನರಿಗೆ ಸೇರಿದ್ದು, ಅದನ್ನು ಮತ್ತೆ ಜನರ ಪ್ರತಿಭಟನೆಯ ಸ್ಥಳವನ್ನಾಗಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
ಸೌರವ್ ದಾಸ್, ಆಶುತೋಷ್ ರಂಕಾ ನ್ಯಾಯಾಂಗ ಬಂಧನಕ್ಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿಯ ನಾಯಕರು ಮಂಗಳವಾರ ಬೆಳಗ್ಗೆ ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ಮುಂದಾಗಿದ್ದರು. ಈ ವೇಳೆ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಸೇರಿದಂತೆ ಸಿಜೆಪಿಯ 12ಕ್ಕೂ ಹೆಚ್ಚು ನಾಯಕರು ಪ್ರತಿಭಟನಾ ಸ್ಥಳದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದರು.
ಲ್ಯೂಟನ್ಸ್ ದೆಹಲಿಯ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳವೆಂದು ಪರಿಗಣಿಸುವ ಅಧಿಸೂಚನೆಯನ್ನು ದೆಹಲಿ ಪೊಲೀಸರು ಹಿಂಪಡೆದ ಮರುದಿನವೇ ಈ ಘಟನೆ ನಡೆದಿದೆ.
ಐದು ದಿನಗಳ ನ್ಯಾಯಾಂಗ ಬಂಧನಕ್ಕೆ
ಬುಧವಾರ ಬೆಳಗ್ಗೆ ಸೌರವ್ ದಾಸ್, ಆಶುತೋಷ್ ರಂಕಾ ಮತ್ತು ಸಿಜೆಪಿಯ ರಾಷ್ಟ್ರೀಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ ಅವರನ್ನು ಮಂದಿರ್ ಮಾರ್ಗ ಪೊಲೀಸ್ ಠಾಣೆಯಲ್ಲಿರುವ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ದಾಸ್ ಮತ್ತು ರಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ವೈಯಕ್ತಿಕ ಬಾಂಡ್‌ಗೆ ಸಹಿ ಹಾಕಿದ ಬಳಿಕ ಅಜಿಂಕ್ಯ ಶಿಂಧೆ ಅವರನ್ನು ಬಿಡುಗಡೆ ಮಾಡಲಾಯಿತು.
ವಕೀಲರನ್ನು ಭೇಟಿಯಾಗಲು ಅವಕಾಶ ನೀಡಿಲ್ಲ
ಸಿಜೆಪಿ ನಾಯಕರನ್ನು ವಶಕ್ಕೆ ಪಡೆದ ಬಳಿಕ, ಸಂಘಟನೆಯ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಂಧಿತ ನಾಯಕರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವರಿಗೆ ತಮ್ಮ ಕಾನೂನು ಪ್ರತಿನಿಧಿಯನ್ನು ಭೇಟಿಯಾಗಲು ಅವಕಾಶ ನೀಡಿಲ್ಲ ಎಂದು ದೂರಿದ್ದಾರೆ.
ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರಿಗೆ ತಡರಾತ್ರಿಯವರೆಗೂ ವಕೀಲರನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ. ಅಲ್ಲದೆ, ಅವರನ್ನು ಮುಂಜಾನೆ 3 ಗಂಟೆಗೆ ಖಾಸಗಿ ವ್ಯಾನ್‌ನಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆತರಲಾಯಿತು ಎಂದು ರತ್ನಾ ಸಿಂಗ್ ಎಕ್ಸ್‌ನಲ್ಲಿ ಆರೋಪಿಸಿದ್ದಾರೆ. ಈ ಬೆಳವಣಿಗೆಯು ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು, ಸಾರ್ವಜನಿಕ ಪ್ರತಿಭಟನಾ ಸ್ಥಳಗಳ ಮೇಲಿನ ನಿರ್ಬಂಧ ಮತ್ತು ನಾಗರಿಕರ ಸಂವಿಧಾನಬದ್ಧ ಹಕ್ಕುಗಳ ಕುರಿತು ರಾಜಕೀಯ ಚರ್ಚೆಗೆ ಕಾರಣವಾಗಿದೆ.


Click it and Unblock the Notifications
