Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ
ಎನ್‌ಡಿಎ ವಿರುದ್ಧದ ಹೋರಾಟ ತೀವ್ರಗೊಳಿಸುವ ಹಾದಿಯಲ್ಲಿ ವಿರೋಧ ಪಕ್ಷ ಮಹತ್ವದ ಹೆಜ್ಜೆ ಇಟ್ಟಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಧಾರವನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಟಿಎಂಸಿ ಸಂಸದ ಡೆರೆಕ್ ಒ'ಬ್ರೇನ್ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ ನಾಯಕ ಹಮುನನ್ ಬೇನಿವಾಲ್ ಸಭೆಯಲ್ಲಿ ಭಾಗವಹಿಸಿದ್ದರು.

ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡುವ ನಿರ್ಧಾರವನ್ನು ತಿಳಿಸಿದ್ದಾರೆ, ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ, ರಾಹುಲ್ ಗಾಂಧಿ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವುದು ನಮಗೆ ಖುಷಿ ತಂದಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ್ ದುಬೆ ಹೇಳಿದ್ದಾರೆ.
ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಮಂಗಳವಾರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅತಿ ದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ 10 ವರ್ಷಗಳ ನಂತರ ವಿಪಕ್ಷ ನಾಯಕನ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಎರಡು ಚುನಾವಣೆಗಳಲ್ಲಿ ಲೋಕಸಭೆಯಲ್ಲಿ ಸ್ಥಾನ ಪಡೆಯಲು ಅಗತ್ಯವಿರುವ ಶೇ 10ರಷ್ಟು ಸದಸ್ಯರನ್ನು ಪಡೆಯುವಲ್ಲಿ ವಿಫಲವಾಗಿತ್ತು.
ಸಂಪ್ರದಾಯದಂತೆ ಪ್ರತಿಪಕ್ಷದ ಸದಸ್ಯರಿಗೆ ಉಪಸಭಾಪತಿ ಸ್ಥಾನ ನೀಡುವ ಭರವಸೆಯನ್ನು ನಿರಾಕರಿಸಿದ ಬಳಿಕ, ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ಕೊನೆ ಗಳಿಗೆಯಲ್ಲಿ ಕೆ.ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುವಂತಾಗಿದೆ. ಬಿಜೆಪಿಯ ಓಂ ಬಿರ್ಲಾ ಕಳೆದ ಅವಧಿಯಲ್ಲಿ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದರು.












Click it and Unblock the Notifications