ಆರ್ಟಿಕಲ್ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ದೇಶದ ಗಮನ
ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ತೆಗೆದುಹಾಕುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ. ಸುಪ್ರೀಂ ಕೋರ್ಟ್ ತೀರ್ಪಿಗೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಹಿಂದಿನ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವು ಸಾಂವಿಧಾನಿಕವಾಗಿತ್ತೇ ಎಂಬುದನ್ನು ನಿರ್ಧರಿಸುತ್ತದೆ.

ಈ ಪ್ರಕರಣದ ವಿಚಾರಣೆ ಆಗಸ್ಟ್ 2ರಂದು ಪ್ರಾರಂಭವಾಯಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ರಾಜೀವ್ ಧವನ್, ಜಾಫರ್ ಶಾ, ದುಶ್ಯಂತ್ ದವೆ ಮತ್ತು ಇತರ ಹಿರಿಯ ವಕೀಲರು ವಾದ ಮಂಡಿಸಿದರು.
ವಿಚಾರಣೆಯ ವೇಳೆ 370 ನೇ ವಿಧಿ ರದ್ದತಿಯನ್ನು ಪ್ರತಿಪಾದಿಸುವವರ ವಾದವನ್ನು ನ್ಯಾಯಾಲಯ ಆಲಿಸಿತು ಮತ್ತು ಕೇಂದ್ರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ ಗಿರಿ ಮತ್ತು ಇತರರು ಕೋರ್ಟ್‌ನಲ್ಲಿ ಈ ವೇಳೆ ವಾದ ಮಂಡಿಸಿದರು. ಆಗಸ್ಟ್‌ನಲ್ಲಿ ಆರಂಭವಾದ 16 ದಿನಗಳ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಪ್ರಕರಣದ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಆದರೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ನಿರ್ಧಾರವನ್ನು ನೀಡಲಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಲಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಪೀಠದ ಇತರ ಸದಸ್ಯರು ಈ ವೇಳೆ ಹಾಜರಿರಲಿದ್ದಾರೆ.
ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿತು. ಇದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು.
ಆರ್ಟಿಕಲ್ 370 ರದ್ಧತಿ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಗುರುತಿನ ಮೇಲೆ ಪ್ರಭಾರ ಬೀರಲಿದೆ. ಜೊತೆಗೆ ಈ ಪ್ರದೇಶದ ಪ್ರದೇಶದ ಸ್ವಾಯತ್ತತೆ ಮತ್ತು ಜನಸಂಖ್ಯಾ ಸಂಯೋಜನೆಗೆ ಅದರ ಸಂಭಾವ್ಯ ಪರಿಣಾಮಗಳ ಬಗ್ಗೆ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲೇ ಅರ್ಜಿದಾರರು ಆರ್ಟಿಕಲ್ 370 ರದ್ಧತಿಯು ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದರು.
ಪೂರ್ಣ ಪ್ರಮಾಣದ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರ ಸರ್ಕಾರವು ತನಗಿರುವ ಅಖಂಡ ಬಹುಮತ ಮತ್ತು ಕಾರ್ಯನಿರ್ವಾಹಕ ಆದೇಶಗಳನ್ನು ದುರುಪಯೋಗ ಮಾಡಿಕೊಂಡಿದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಏಕೀಕರಣಕ್ಕೆ ಅಡ್ಡಿಪಡಿಸುತ್ತದೆ. ಈ ಪ್ರದೇಶದ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಲಾಯಿತು ಎಂದು ಕೇಂದ್ರ ಸರಕಾರವು ತನ್ನ ವಾದವನ್ನು ಮಂಡಿಸಿತು. ರದ್ಧು ನಿರ್ಧಾರವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ, ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ಮತ್ತು ಪ್ರದೇಶದಲ್ಲಿ ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಾದಿಸಲಾಯಿತು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣವಾಗಿ ಅನ್ವಯವಾಗದ ರಾಷ್ಟ್ರೀಯ ಕಾನೂನುಗಳು ಮತ್ತು ಕಾರ್ಯಕ್ರಮಗಳ ಅನ್ವಯಕ್ಕೆ ಇದು ಅನುಕೂಲವಾಗುತ್ತದೆ.












Click it and Unblock the Notifications