RG Kar Rape, Murder Case: ವೈದ್ಯೆಯ ಮೇಲೆ ಅತ್ಯಾಚಾರ, ಕೊಲೆ: ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ
ಕೋಲ್ಕತ್ತಾ, ಜನವರಿ 20: ದೇಶವನ್ನೇ ಬೆಚ್ಚಿಬೀಳಿಸಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ಶನಿವಾರ ತೀರ್ಪು ನೀಡಿತ್ತು. ಸೋಮವಾರ ಅಪರಾಧಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗಿದೆ.
ಸೋಮವಾರ ನ್ಯಾಯಾಧೀಶ ಅನಿರ್ ಬಾನ್ ದಾಸ್ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ವಾದ ಮಂಡಿಸಿತ್ತು.

ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ ಬಾನ್ ದಾಸ್ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೃತಪಟ್ಟ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ತರಬೇತಿ ನಿರತ ವೈದ್ಯೆಯ ಮೇಲೆ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಆವರಣದಲ್ಲಿಯೇ
ಅತ್ಯಾಚಾರ ನಡೆಸಲಾಗಿತ್ತು, ಬಳಿಕ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ವೈದ್ಯರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು. ಇಂದು ಪ್ರಕರಣದ ತೀರ್ಪು ಪ್ರಕಟವಾಗಿದೆ.
ಸಂಜಯ್ ರಾಯ್ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದರು. 2024ರ ಆಗಸ್ಟ್ 9ರಂದು ಈ ಘಟನೆ ನಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಆರಂಭಿಸಿದ 57 ದಿನಗಳಲ್ಲಿಯೇ ಕೋರ್ಟ್ ಸಂಜಯ್ ರಾಯ್ ಅಪರಾಧಿ ಎಂದು ತೀರ್ಪು ನೀಡಿತ್ತು, ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ.
ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಪಶ್ಚಿಮ ಬಂಗಾಳ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಲಾಗಿತ್ತು. ಈ ಕುರಿತು ಪಶ್ಚಿಮ ಬಂಗಾಳ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಈ ಪ್ರಕರಣದ ಮೇಲ್ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಹ ನಡೆಸುತ್ತಿತ್ತು.
ಆಗಸ್ಟ್ 9ರಂದು ಆರ್‌ಜಿ ಕರ್ ಆಸ್ಪತ್ರೆಯ ಆವರಣದಲ್ಲಿಯೇ ತರಬೇತಿ ನಿರತ ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೋಲ್ಕತ್ತಾ ಪೊಲೀಸರು ಆಗಸ್ಟ್ 10ರಂದು ಸಂಜಯ್ ರಾಯ್ ಬಂಧಿಸಿದ್ದರು. ಈತ ಪೊಲೀಸ್ ಮಾಹಿತಿದಾರನಾಗಿಯೂ ಕೆಲಸ ಮಾಡಿದ್ದ. ಸೋಮವಾರ ಸಂಜಯ್ ರಾಯ್ ನನ್ನು ಕೋರ್ಟ್‌ಗೆ ಖುದ್ದಾಗಿ ಹಾಜರುಪಡಿಸಿ ಆತನ ಸಮ್ಮುಖದಲ್ಲಿಯೇ ಪ್ರಕರಣದ ತೀರ್ಪಿನ ಶಿಕ್ಷೆ ಪ್ರಕಟಿಸಲಾಗಿದೆ.
2024ರ ನವೆಂಬರ್ 12ರಂದು ಈ ಪ್ರಕರಣದ ವಿಚಾರಣೆ ಆರಂಭವಾಗಿತ್ತು. ಜನವರಿ 9ರಂದು ಸಂಜಯ್ ರಾಯ್ ವಿಚಾರಣೆ ನಡೆದಿತ್ತು. ಸಿಬಿಐ ಈ ಪ್ರಕರಣದಲ್ಲಿ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ವಾದ ಮಂಡನೆ ಮಾಡಿತ್ತು. ಶನಿವಾರ ಸಂಜಯ್ ರಾಯ್ ಅಪರಾಧಿ ಎಂದು ತೀರ್ಪು ಬಂದ ಬಳಿಕ ಆತನ ತಾಯಿ ಪ್ರತಿಕ್ರಿಯೆ ನೀಡಿ, "ನನಗೂ ಹೆಣ್ಣು ಮಕ್ಕಳಿದ್ದಾರೆ. ಅವರ ನೋವು ನನಗೆ ಅರ್ಥವಾಗುತ್ತದೆ. ಆತನನ್ನು ಬೇಕಾದರೆ ನೇಣಿಗೇರಿಸಿ" ಎಂದು ಹೇಳಿಕೆ ನೀಡಿದ್ದರು.












Click it and Unblock the Notifications