ಭಾರತದ ಶ್ರೀಮಂತ ಮುಖ್ಯಮಂತ್ರಿಗಳು: ಸಿಎಂ ಬಸವರಾಜ ಬೊಮ್ಮಾಯಿ ಆಸ್ತಿ ಎಷ್ಟು ಗೊತ್ತೆ?
ನವದೆಹಲಿ, ಏಪ್ರಿಲ್. 13: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ಸಮೀಕ್ಷೆಗಳು ಹೊರ ಬರುತ್ತಿವೆ. ಚುನಾವಣಾ ಪೂರ್ವ ಸಮೀಕ್ಷೆಗಳ ಬೆನ್ನಲ್ಲೇ ದೇಶದ ಶ್ರೀಮಂತ ಮುಖ್ಯಮಂತ್ರಿಗಳು ಯಾರು, ಎಷ್ಟನೇ ಸಂಖ್ಯೆಯಲ್ಲಿದ್ದಾರೆ ಎಂಬ ಬಗ್ಗೆಯೂ ವರದಿ ಬಂದಿದೆ. ಇದರಲ್ಲಿ ಚುನಾವಣೆಗೆ ಸಿದ್ಧವಾಗಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರೂ ಇದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನ ಹೊಸ ವರದಿಯ ಪ್ರಕಾರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಒಟ್ಟು 30 ಮುಖ್ಯಮಂತ್ರಿಗಳ ಪೈಕಿ ದೇಶದ 13 ನೇ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಅತ್ಯಂತ ಶ್ರೀಮಂತರಾಗಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಇದ್ದಾರೆ. ಜಗನ್ ಮೋಹನ್ ರೆಡ್ಡಿ ಅವರು ಒಟ್ಟು 510 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊನೆಯ ಸ್ಥಾನದಲ್ಲಿದ್ದು, ಕೇವಲ 15 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ.
30 ಮುಖ್ಯಮಂತ್ರಿಗಳಲ್ಲಿ 29 ಮಂದಿ "ಕೋಟ್ಯಾಧಿಪತಿಗಳು" ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಸಿಎಂ ಬಸವರಾಜ ಬೊಮ್ಮಾಯಿ ಒಟ್ಟು 30 ರಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಅವರು ಕೂಡ ಕೋಟ್ಯಾಧಿಪತಿಯಾಗಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿಗಳ ಮುಖ್ಯಮಂತ್ರಿಗಳನ್ನು ವಿಶ್ಲೇಷಿಸಿದೆ. ಎಲ್ಲಾ 30 ಮುಖ್ಯಮಂತ್ರಿಗಳು ಸ್ವಯಂ ಘೋಷಿಸಿರುವ ಪ್ರಮಾಣ ಚುನಾವಣಾ ಅಫಿಡವಿಟ್‌ಗಳನ್ನು ಪರಿಶೀಲಿಸಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಇಲ್ಲ.

ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನಂತರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಇಬರಬು ಮುಖ್ಯಮಂತ್ರಿಗಳು ಕ್ರಮವಾಗಿ 163 ಕೋಟಿ ರೂ. ಮತ್ತು 63 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ತಿಳಿಸಿದೆ.
ಇನ್ನು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಒಂದು (1) ಕೋಟಿಗಿಂತ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಸೇರಿಸಲಾಗಿದೆ.
ಇದರ ಜೊತೆಗೆ 43 ರಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ತಿಳಿಸಲಾಗಿದೆ.
ಕರ್ನಾಟಕದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರವು 40% ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷ ಕಾಂಗ್ರೆಸ್ ಆಡಳಿತ ಪಕ್ಷವನ್ನು ತೀವ್ರವಾಗಿ ಖಂಡಿಸಿದ್ದು, ಹೊಸ ಹೊಸ ಅಭಿಯಾನಗಳ ಮೂಲಕ ಸರ್ಕಾರದ ರ್ಭರಷ್ಟಾಚಾರವನ್ನು ಬಯಲಿಗೆಳೆಯಲು ಪ್ರಯತ್ನಿಸುತ್ತಿದೆ. ರಾಜ್ಯದಲ್ಲಿ ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications