ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏರೋ ಇಂಡಿಯಾ 2021: ಆಯೋಜನೆಗೆ ಪೂರ್ವಭಾವಿ ಸಭೆ

|
Google Oneindia Kannada News

ಬೆಂಗಳೂರು, ಅ. 07: ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ ಮಾತನಾಡಿದರು.

ಕಳೆದ ಹನ್ನೆರಡು ಏರೋ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಪ್ರಸಕ್ತ ಸಾಲಿನಲ್ಲಿಯೂ ಫೆಬ್ರವರಿ 3 ರಿಂದ 7, 2021 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.

ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಇಂತಹ ಮಹತ್ವಪೂರ್ಣ ಕಾರ್ಯಕ್ರಮವನ್ನು ಆಯೋಜಿಸುವುದು ಕರ್ನಾಟಕ ರಾಜ್ಯ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಒಂದು ಸವಾಲಿನ ವಿಷಯ. ಏರೋ ಇಂಡಿಯಾ 2021ರ ವೆಬ್‍ಸೈಟ್ ಪ್ರಾರಂಭವಾದ ಕೂಡಲೇ ವಸ್ತುಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಕೋವಿಡ್ ಮಾರ್ಗಸೂಚಿ ಪಾಲನೆ

ಕೋವಿಡ್ ಮಾರ್ಗಸೂಚಿ ಪಾಲನೆ

ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಪ್ರಾದೇಶಿಕ ನಾಗರಿಕ ವಿಮಾನಯಾನ ಸೌಲಭ್ಯಗಳು ಮತ್ತು ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಸ್ಥಾಪನೆಗೆ ವಿಶೇಷ ಸಹಾಯಧನವನ್ನು ಹೂಡಿಕೆದಾರರಿಗೆ ಕರ್ನಾಟಕ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದರು.

ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಭಾಗವಹಿಸುವ ಅಂತರರಾಷ್ಟ್ರೀಯ ಗಣ್ಯರು, ಅಧಿಕಾರಿ/ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಕಾಲಕಾಲಕ್ಕೆ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು ಮುಂತಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದರು.

ರಾಜ್ಯದ ಕೊಡುಗೆ ಶೇ. 25

ರಾಜ್ಯದ ಕೊಡುಗೆ ಶೇ. 25

ಭಾರತದ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮಕ್ಕೆ ಕರ್ನಾಟಕ ರಾಜ್ಯ ಶೇ. 25 ರಷ್ಟು ಕೊಡುಗೆ ನೀಡುತ್ತಿದೆ. ಭಾರತದ ವೈಮಾನಿಕ ಸಂಬಂಧಿತ ರಫ್ತಿಗೆ ಶೇ.65% ರಷ್ಟು ಹಾಗೂ ರಕ್ಷಣಾ ವಲಯದ ಸೇವೆಗಳಿಗಾಗಿ ಹೆಲಿಕಾಪ್ಟರ್ ಮತ್ತು ವಿಮಾನ ಉತ್ಪಾದನೆಗೆ ಶೇ.67% ಕೊಡುಗೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿವರಿಸಿದರು.

ರಾಷ್ಟ್ರದಲ್ಲಿ ಏರೋಸ್ಪೇಸ್ ನೀತಿಯನ್ನು ರೂಪಿಸಿದ ಮೊಟ್ಟಮೊದಲ ರಾಜ್ಯ ಕರ್ನಾಟಕ. ಹೆಚ್‍ಎಎಲ್, ಬೆಮೆಲ್, ಬಿಇಎಲ್ ನಂತಹ ಪ್ರಮುಖ ಸಾರ್ವಜನಿಕ ವಲಯದ ಘಟಕಗಳು ಬೆಂಗಳೂರಿನಲ್ಲಿ ಸ್ಥಾಪಿತಗೊಂಡಿವೆ. ಬೆಳಗಾವಿಯಲ್ಲಿ ಖಾಸಗಿ ಏರೋಸ್ಪೇಸ್ ಆರ್ಥಿಕ ವಲಯ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 1000 ಎಕರೆ ಪ್ರದೇಶದಲ್ಲಿ ಏರೋಸ್ಪೇಸ್ ಪಾರ್ಕ್, ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ಮತ್ತು ತುಮಕೂರು ಜಿಲ್ಲೆಯಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್‍ನ್ನು ಕರ್ನಾಟಕ ಒಳಗೊಂಡಿದೆ ಎಂದರು.

ಶಾಂತಿಗಾಗಿ ರಕ್ಷಣಾ ಇಲಾಖೆ

ಶಾಂತಿಗಾಗಿ ರಕ್ಷಣಾ ಇಲಾಖೆ

ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಮಾತನಾಡಿ, ಅತಿಥಿ ದೇವೋಭವ ಎಂಬ ಮಾತಿನಲ್ಲಿ ನಂಬಿಕೆ ಇರುವವರು ನಾವು. ಶಾಂತಿಗಾಗಿ ರಕ್ಷಣಾ ಇಲಾಖೆಯನ್ನು ಇನ್ನಷ್ಟು ಸಬಲಗೊಳಿಸಲು ಪೂರಕವಾಗಿ ರಕ್ಷಣಾ ನೀತಿಯನ್ನು ಅಳವಡಿಸಿಕೊಳ್ಳುವುದೇ ನಮ್ಮ ಉದ್ದೇಶ.

ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ವಲಯವನ್ನು ಹೊಂದಿದೆ. ಏರೋ ಇಂಡಿಯಾ 2021 ಮೂಲಕ ಭಾರತ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮದಲ್ಲಿ ಮುಂಚೂಣಿಯ ಐದು ರಾಷ್ಟ್ರಗಳಲ್ಲಿ ಒಂದಾಗಿರಬೇಕು ಎನ್ನುವುದು ನಮ್ಮ ಆಶಯ ಎಂದರು.

ಸಂಶೋಧನೆ ಮತ್ತು ಅಭಿವೃದ್ದಿ

ಸಂಶೋಧನೆ ಮತ್ತು ಅಭಿವೃದ್ದಿ

ರಕ್ಷಣಾ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಕ್ರಿಯ ಭಾಗವಹಿಸುವಿಕೆಯಿಂದ ಭಾರತವನ್ನು ರಕ್ಷಣಾ ಉತ್ಪನ್ನಗಳ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಪರ್ಕ ರಹಿತ ವ್ಯವಹಾರವನ್ನು ಖಾತ್ರಿಪಡಿಸಲು ಎಲ್ಲ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್, ವಿವಿಧ ದೇಶಗಳ ರಾಯಭಾರಿಗಳು, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Chief Minister B.S.Yediyurappa participated in the Ambassador’s Round Table virtual summit regarding the 13th edition of the Aero India 2021, chaired by Rajnath Singh, Union Minister for Defence here today. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X