ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಎಷ್ಟು ಹಣ ಬೇಕು?
ನವದೆಹಲಿ, ಜೂನ್ 07: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆಯೂ ಲಸಿಕೆ ಉತ್ಪಾದನೆ ವೇಗದಲ್ಲೇ ವಿತರಣೆಯನ್ನೂ ಮಾಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದಲೇ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಿಸಿದರು. ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಕೊವಿಡ್-19 ಲಸಿಕೆಯನ್ನು ಖರೀದಿಸಲು ಅವಕಾಶ ನೀಡಲಾಗಿದೆ.
ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಸಿಕೆಗೆ ದುಬಾರಿ ಸೇವಾ ಶುಲ್ಕವನ್ನು ಹೇರುವಂತಿಲ್ಲ. ಅದರ ಬದಲಿಗೆ ಒಂದು ಡೋಸ್ ಕೊವಿಡ್-19 ಲಸಿಕೆ ನೀಡಲು 150 ರೂಪಾಯಿ ಸೇವಾ ಶುಲ್ಕವನ್ನು ವಿಧಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಪ್ರಸ್ತುತ ಕೊರೊನಾವೈರಸ್ ಲಸಿಕೆಗೆ ನಿಗದಿಗೊಳಿಸಿರುವ ಬೆಲೆಯ ಮೇಲೆ 300 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಶೀಲಿಸಿದ ಕರ್ನಾಟಕ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಗರಿಷ್ಠ 200 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಅನುಮತಿ ನೀಡಿತ್ತು.

130 ಕೋಟಿ ಜನರಿಗೆ ಲಸಿಕೆ ವಿತರಣೆಯ ಸವಾಲು
ಕೊರೊನಾವೈರಸ್ ವಿರುದ್ಧ ಹೋರಾಡುವುದಕ್ಕೆ ಲಸಿಕೆ ವಿತರಣೆ ಮಾಡುವುದೇ ಉತ್ತಮ ಮಾರ್ಗವಾಗಿದೆ. ದೇಶದ 130 ಕೋಟಿ ಜನರಿಗೆ ಲಸಿಕೆ ನೀಡುವುದು ಬಹುದೊಡ್ಡ ಸವಾಲಾಗಿದೆ. ಭಾರತದಲ್ಲಿ ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಣೆ ಆರಂಭಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮೂರು ಹಂತ
ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ದೇಶದಲ್ಲಿ 24 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 142 ದಿನಗಳಲ್ಲಿ 24,60,80,900 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ
ಭಾರತದಲ್ಲಿ ಒಂದೇ ದಿನ 1,00,636 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,74,399 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2427 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು 2,89,09,975 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,71,59,180 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,49,186 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 14,01,609 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications