Maharashtra Bandh: ಬದ್ಲಾಪುರ ಲೈಂಗಿಕ ದೌರ್ಜನ್ಯ- ಆ.24ರಂದು ಮಹಾರಾಷ್ಟ್ರ ಬಂದ್‌ಗೆ MVA ಕರೆ
ಥಾಣೆ ಆಗಸ್ಟ್ 22: ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಬುಧವಾರ ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ.
ಶರದ್ ಪವಾರ್ ನೇತೃತ್ವದ ಎಂವಿಎ ಮಿತ್ರಪಕ್ಷಗಳಾದ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಸಭೆಯನ್ನು ನಡೆಸಿ, ನಂತರ ಈ ನಿರ್ಧಾರವನ್ನು ತೆಗೆದುಕೊಂಡಿವೆ. ರಾಜ್ಯದಲ್ಲಿ ಮಹಿಳಾ ಭದ್ರತೆ ಮತ್ತು ಬಿಜೆಪಿ ನೇತೃತ್ವದ ಸರ್ಕಾರದ ಎಲ್ಲಾ ರಂಗಗಳಲ್ಲಿನ ವೈಫಲ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಎಲ್ಲಾ ಎಂವಿಎ ಮಿತ್ರಪಕ್ಷಗಳು ಆಗಸ್ಟ್ 24 ರಂದು ಬಂದ್‌ನಲ್ಲಿ ಭಾಗವಹಿಸಲಿವೆ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮಹಾರಾಷ್ಟ್ರದ ಬದ್ಲಾಪುರದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಈ ಘಟನೆಯನ್ನು ಖಂಡಿಸಿ ಬುಧವಾರ ಹಿಂಸಾತ್ಮಕ ರೂಪ ಪಡೆದಿದ್ದ ಪ್ರತಿಭಟನೆಯಿಂದಾಗಿ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಇನ್ನೂ 72 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳಲ್ಲಿ ಏಳು ಜನ ಪೊಲೀಸರು ಹಾಗೂ ಎಂಟು ಜನ ರೈಲ್ವೇ ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದರಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ನಿಷೇಧಾಜ್ಷೆಯನ್ನು ಜಾರಿಗೊಳಿಸಲಾಗಿತ್ತು. ಇದನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
23 ವಯಸ್ಸಿನ ಸ್ವಚ್ಚತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶಾಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ನಡೆದಿದೆ. ಆಗಸ್ಟ್ 12-13ರಂದು ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.

ವಾಶ್‌ರೂಮ್‌ಗೆ ತೆರಳಿದ್ದ ಬಾಲಕಿಯರ ಮೇಲೆ ಈ ಲೈಂಗಿಕ ದೌರ್ಜನೆ ನಡೆದಿದೆ ಎಂದು ಆರೋಪಿಸಲಾಗಿದೆ. ಘಟನೆ ಖಂಡಿಸಿ ಸಾರ್ವಜನಿಕರು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಶಾಲೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ಮಾಡಿದ್ದರು. ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿದ್ದಾರೆ.
ಆದರೆ ಈ ಬಗ್ಗೆ ದೂರನ್ನು ನೀಡಲು ಬಂದ ಬಾಲಕಿಯರ ಪೋಷಕರನ್ನು ಬದ್ಲಾಪುರ ಪೊಲೀಸ್ ಠಾಣೆಯಲ್ಲಿ 11 ಗಂಟೆಗಳ ಕಾಲ ಕಾಯುವಂತೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಘಟನೆಯ ಕುರಿತು ಮಂಗಳವಾರ ಸಾವಿರಾರು ಪ್ರತಿಭಟನಾಕಾರರು ಬದ್ಲಾಪುರ ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದು ಶಾಲಾ ಕಟ್ಟಡಕ್ಕೆ ಮುತ್ತಿಗೆ ಹಾಕಿದರು. ಪ್ರತಿಭಟನೆಯಲ್ಲಿ ಮುಂಬೈ ಕಾಂಗ್ರೆಸ್ ಅಧ್ಯಕ್ಷ ವರ್ಷಾ ಗಾಯಕ್ವಾಡ್, ವಿಜಯ್ ವಾಡೆತ್ತಿವಾರ್ ಮತ್ತು ಕೆಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications