ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
ನವದೆಹಲಿ, ಜನವರಿ, 19: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಶೋಷಣೆ ಮತ್ತು ಮಾನಸಿಕ ಕಿರುಕುಳದ ಆರೋಪಗಳ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.
ದೇಶದ ಪ್ರಮುಖ ಕುಸ್ತಿಪಟುಗಳು ಬುಧವಾರ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಬಂಡಾಯವೆದ್ದಿದ್ದು. ಒಕ್ಕೂಟವನ್ನು ಸರ್ವಾಧಿಕಾರಿ ರೀತಿಯಲ್ಲಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟುಗಳನ್ನು ಭಾರತದ ಹೆಮ್ಮೆ ಎಂದು ಕರೆಯುವ ನಾವು ಅವರ ಮಾತನ್ನು ಕೇಳಬೇಕು ಎಂದು ಹೇಳಿದ್ದಾರೆ.
हमारे खिलाड़ी देश की शान हैं। विश्व स्तर पर अपने प्रदर्शन से वे देश का मान बढ़ाते हैं। कुश्ती फेडरेशन व उसके अध्यक्ष पर खिलाड़ियों ने शोषण के गंभीर आरोप लगाए हैं। इन खिलाड़ियों की आवाज सुनी जानी चाहिए।
— Priyanka Gandhi Vadra (@priyankagandhi) January 19, 2023
आरोपों की जांच कर उचित कार्रवाई की जानी चाहिए।
"ನಮ್ಮ ಆಟಗಾರರು ದೇಶದ ಹೆಮ್ಮೆ. ವಿಶ್ವ ಮಟ್ಟದಲ್ಲಿ ತಮ್ಮ ಸಾಧನೆಯಿಂದ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕುಸ್ತಿ ಫೆಡರೇಷನ್ ಮತ್ತು ಅದರ ಅಧ್ಯಕ್ಷರ ವಿರುದ್ಧ ಆಟಗಾರರು ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಆಟಗಾರರ ಧ್ವನಿ ಕೇಳಬೇಕಾಗಿದೆ. ಆರೋಪಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಟ್ವೀಟ್ ಮಾಡಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಎರಡು ಬಾರಿಯ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ವಿಜೇತ ವಿನೇಶ್ ಫೋಗಟ್ ನೇತೃತ್ವದಲ್ಲಿ ಸುಮಾರು 200 ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿ ಒಕ್ಕೂಟ ಮತ್ತು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಧರಣಿ ನಡೆಸುತ್ತಿದ್ದಾರೆ.
ಕುಸ್ತಿಪಟುಗಳ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.
ಸಂಸತ್ತಿನ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಈ ಆರೋಪಗಳನ್ನು ನಿರಾಕರಿಸಿದ್ದು, ಈ ಬಂಡಾಯ ತನ್ನನ್ನು ಪದಚ್ಯುತಗೊಳಿಸುವ ಪಿತೂರಿಯ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿರುವ ಬಿಜೆಪಿ ನಾಯಕರ ಪಟ್ಟಿಗೆ ಕೊನೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ. 'ಬೇಟಿ ಬಚಾವೋ' ಎಂಬುದು ಬಿಜೆಪಿ ನಾಯಕರಿಂದ ಹೆಣ್ಣು ಮಕ್ಕಳನ್ನು ರಕ್ಷಿಸುವ ಎಚ್ಚರಿಕೆಯೇ..? ಉತ್ತರಕ್ಕಾಗಿ ಭಾರತ ಕಾಯುತ್ತಿದೆ'' ಎಂದು ರಮೇಶ್ ಆಕ್ರೋಶ ಹೊರಹಾಕಿದ್ದಾರೆ.











Click it and Unblock the Notifications