ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ! ಚೌಹಾಣ್ ವಿಶ್ವಾಸ
ಇಂದೋರ್, ಅಕ್ಟೋಬರ್ 22: 'ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ' ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದೋರ್ ನಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡುತ್ತಿದ್ದ ಅವರು, ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.
'ನಾವು ಇಷ್ಟು ವರ್ಷದ ಆಡಳಿತದಲ್ಲಿ ಮಧ್ಯಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ. ಮತ್ತೆ ಅಧಿಕಾರಕ್ಕೆ ಬಂದು ಮಧ್ಯಪ್ರದೇಶವನ್ನು ದೇಶದಲ್ಲೇ ಅತ್ಯುತ್ತಮ ರಾಜ್ಯವನ್ನಾಗಿ ಮಾಡುತ್ತೇವೆ' ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, '2003 ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಮಯದಲ್ಲಿ ರಾಜ್ಯದ ಪರಿಸ್ಥಿತಿ ತೀರಾ ಚಿಂತಾಜನಕವಾಗಿತ್ತು. ಕಾಂಗ್ರೆಸ್ ಪಕ್ಷವು ತನ್ನ ಆಳ್ವಿಕೆಯಲ್ಲಿ ದೇಶವನ್ನು ಕತ್ತಲೆಗೆ ದೂಡಿತ್ತು. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಾವು ಸಾಕಷ್ಟು ಪ್ರಯತ್ನ ಮಾಡಿದ್ದೇವೆ' ಎಂದರು.

ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬೇಕಿರುವ ಮ್ಯಾಜಿಕ್ ನಂಬರ್ 116. ಮೂರು ಅವಧಿಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬಂದಿದ್ದು, ಇದೀಗ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.












Click it and Unblock the Notifications