ಮಹಾರಾಷ್ಟ್ರ ಚುನಾವಣೆಗೆ ಸಿದ್ದು, ಖರ್ಗೆ ಸ್ಟಾರ್ ಪ್ರಚಾರಕರು
ಬೆಂಗಳೂರು, ಅ.4 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ಸಿಎಂ ಸಿದ್ದರಾಮಯ್ಯ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಹಲವು ಸಚಿವರು ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕಾರ್ಯನಿರ್ವಹಿಸಲಿದ್ದಾರೆ.
ಮಹಾರಾಷ್ಟ್ರ ಕಾಂಗ್ರೆಸ್ ಸಿದ್ಧಪಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿದೆ. ಉಳಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಚಾರ ನಡೆಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‍ಸಿಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆ ಬಹುಮುಖ್ಯವಾಗಿದೆ. ಆದ್ದರಿಂದ ಪ್ರತಿ ರಾಜ್ಯದ ಪ್ರಭಾವಿ ನಾಯಕರ ಪಟ್ಟಿಯನ್ನು ಮಾಡಿ ಅವರನ್ನು ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ಆಯ್ಕೆ ಮಾಡಿದೆ. ಕರ್ನಾಟಕ ಕೆಲವು ಸಚಿವರು ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಲಿದ್ದಾರೆ. [ಮಹಾರಾಷ್ಟ್ರ ಸಿಎಂ ಪೃಥ್ವಿರಾಜ್ ಚವಾಣ್ ರಾಜೀನಾಮೆ]
ಪಕ್ಷದ ಹೈಕಮಾಂಡ್ ಸೂಚನೆಯಂತೆ ಸಚಿವರಾದ ಡಿ.ಕೆ.ಶಿವಕುಮಾರ್, ರೋಷನ್ ಬೇಗ್, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಅವರು ಮಹಾರಾಷ್ಟ್ರದ ಚುನಾವಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಎಐಸಿಸಿ ಪದಾಧಿಕಾರಿಗಳಾದ ಬಿ.ಕೆ.ಹರಿಪ್ರಸಾದ್, ಆಸ್ಕರ್ ಫರ್ನಾಂಡಿಸ್, ವೀರಪ್ಪ ಮೋಯ್ಲಿ ಅವರು ಕೂಡ ಚುನಾವಣೆ ಕಾರ್ಯಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರು ಮುಂದಿನ ವಾರದಿಂದ ಮಹಾರಾಷ್ಟ್ರ ಪ್ರಚಾರದಲ್ಲಿ ಭಾಗವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಸರಾ ನಂತರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.












Click it and Unblock the Notifications