Odisha train accident: ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ- ಸಿದ್ದರಾಮಯ್ಯ
ಬೆಂಗಳೂರು, ಮೇ 03: ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 300 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಾವಿರಕ್ಕೂ ಅಧಿಕ ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದಲ್ಲಿ ಕನ್ನಡಿಗರೂ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ' ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದೂ ಅವರು ಭರವಸೆ ನೀಡಿದ್ದಾರೆ.
'ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಘಟನೆಗೆ ಸಂತಾಪ ಸೂಚಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, 'ಒಡಿಶಾದ ಬಾಲಸೋರ್‌ನಿಂದ ಬರುತ್ತಿರುವ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕ ಸುದ್ದಿ ಇದು. ಅಲ್ಲಿ #CoromandelExpress ನ ಬೋಗಿಗಳು ಹಳಿತಪ್ಪಿವೆ. ಮತ್ತೊಂದು ರೈಲಿನೊಂದಿಗೆ ಭಾರಿ ಅಪಘಾತ ಸಂಭವಿಸಿದೆ. ಈ ದುರಂತದಿಂದ ಹಾನಿಗೊಳಗಾದ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆಗಳು ಇವೆ' ಎಂದು ಡಿಕೆಶಿ ಹೇಳಿದ್ದಾರೆ.
'ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ಆಘಾತವಾಗಿದೆ. ಇತ್ತೀಚೆಗೆ ಸಂಭವಿಸಿದ ಅತ್ಯಂತ ಭೀಕರ ರೈಲು ದುರಂತವಿದು. ಅಪಘಾತದಲ್ಲಿ ಮೃತಪಟ್ಟವರಿಗೆ ಶಾಂತಿ ಕೋರುತ್ತೇನೆ. ಹಾಗೆಯೇ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.












Click it and Unblock the Notifications