Srikakulam Stampede: ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; ಭಕ್ತರ ಸಾವಿನ ಸಂಖ್ಯೆ ಹೆಚ್ಚಳ
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪ್ರಸಿದ್ಧ ಕಾಶಿಬುಗ್ಗ ಪಟ್ಟಣದ ಶ್ರೀವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 5ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಭಕ್ತರು ಅತ್ಯಂತ ಶುಭವೆಂದು ಪರಿಗಣಿಸುವ ಕಾರ್ತಿಕ ಮಾಸದ ಮೊದಲ ಏಕಾದಶಿಯಂದು ಪ್ರಾರ್ಥನೆ ಸಲ್ಲಿಸಲು ದೇವಾಲಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ದೃಢೀಕರಿಸಿಲ್ಲ. ಆದರೆ ಅಧಿಕಾರಿಗಳ ಪ್ರಕಾರ ಕನಿಷ್ಠ ಐದು ಭಕ್ತರ ಶವಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭಕ್ತರು ಸರತಿ ಸಾಲು ನಿಂತಾಗ ಪರಸ್ಪರ ತಳ್ಳಾಟ ಶುರು ಮಾಡಿದರು. ಇದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಹೇಳುತ್ತಾರೆ. ಈ ಘಟನೆಯಲ್ಲಿ ಹಲವಾರು ಜನರು ಪ್ರಜ್ಞೆ ತಪ್ಪಿದರು. ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಏಕಾದಶಿ ಆಚರಣೆಗಾಗಿ ದೇವಾಲಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ, ಇದರಿಂದಾಗಿ ಜನದಟ್ಟಣೆ ಹೆಚ್ಚಾಗಿದೆ. ಘಟನೆಯಲ್ಲಿ ಹಲವಾರು ಭಕ್ತರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.
ಆಂಧ್ರ ಸಿಎಂ ಸಂತಾಪ
ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತದಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ತಿಳಿಸಿದ್ದೇನೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಘಟನೆ ನಡೆದ ಸ್ವಲ್ಪ ಸಮಯದ ನಂತರ ರಾಜ್ಯ ಕೃಷಿ ಸಚಿವ ಕೆ.ಅಚ್ಚನ್ನಾಯ್ಡು ದೇವಾಲಯಕ್ಕೆ ತಲುಪಿ, ಪರಿಸ್ಥಿತಿಯನ್ನು ನಿರ್ಣಯಿಸಲು ದೇವಾಲಯದ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿರುವುದಾಗಿ ತಿಳಿದುಬಂದಿದೆ.












Click it and Unblock the Notifications