Vande Bharat: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ!
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಭಾನುವಾರ ವಂದೇ ಭಾರತ್ ರೈಲಿಗೆ ಕಲ್ಲು ತೂರಲಾಗಿದ್ದು, ಕೋಚ್‌ನ ಕಿಟಕಿ ಒಡೆದು ಹೋಗಿದೆ. ಈ ವೇಳೆ ರೈಲು ಗೋರಖ್‌ಪುರದಿಂದ ಲಖನೌಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲು 10:40 ಕ್ಕೆ ಲಕ್ನೋ ತಲುಪಿತು. ಪ್ರಧಾನಿ ನರೇಂದ್ರ ಮೋದಿಯವರು ರೈಲ್ವೇ ನಿಲ್ದಾಣಗಳ ಸೌಂದರ್ಯೀಕರಣದ ವರ್ಚುವಲ್ ಕಾರ್ಯಕ್ರಮ ನಡೆಯುತ್ತಿರುವಾಗ ಈ ಘಟನೆ ನಡೆದಿದೆ.

ಬಾರಾಬಂಕಿಯ ರೈಲ್ವೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್‌ಗೆ ಸ್ಥಳದಲ್ಲಿ ಯಾವುದೇ ಅಶಿಸ್ತಿನ ಅಂಶಗಳು ಅಥವಾ ಸಾಕ್ಷಿಗಳು ಕಂಡುಬಂದಿಲ್ಲ.
ಸರ್ಕಾರಿ ಆಸ್ತಿಗೆ ಹಾನಿ ಉಂಟು ಮಾಡಿದ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವ ಮೂಲಕ ಪ್ರಯಾಣಿಕರ ಜೀವಕ್ಕೆ ಅಪಾಯ ತಂದಿರುವ ಬಗ್ಗೆ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಅಯೋಧ್ಯೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಲಾಗಿತ್ತು.
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟದ ಘಟನೆ ಇದೇ ಮೊದಲಲ್ಲ. ಈ ಹಿಂದೆ ಜುಲೈನಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ರಾಮನಗರದ ಹೊರವಲಯದಲ್ಲಿ ಕಲ್ಲು ತೂರಾಟ ನಡೆದಿತ್ತು. ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದ್ದವು.
ಜುಲೈ 8ರಂದು ರಾಮನಗರ ತಾಲೂಕಿನ ವಡೇರಹಳ್ಳಿಯಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 2022 ರಲ್ಲಿ ಪ್ರಾರಂಭವಾದಾಗಿನಿಂದ, ಮೈಸೂರು-ಚೆನ್ನೈ ವಂದೇ ಭಾರತ್ ರೈಲಿನ ಮೇಲೆ ಕನಿಷ್ಠ ಮೂರು ಬಾರಿ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಗಳಲ್ಲಿ ರೈಲಿನ ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಬಗ್ಗೆ ವರದಿಯಾಗಿದೆ. ಈ ಮಧ್ಯೆ, ರಾಮನಗರದಲ್ಲಿ ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೊಲೀಸರು ಬುಧವಾರ ಜಾಗೃತಿ ಕಾರ್ಯಕ್ರಮ ನಡೆಸಿದರು. ಕಲ್ಲು ತೂರಾಟದ ತೀವ್ರ ಪರಿಣಾಮಗಳ ಕುರಿತು ಪ್ರಯಾಣಿಕರಿಗೆ ಅರಿವು ಮೂಡಿಸಿದರು.
ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿತ್ತು. ಕಳೆದ ಕೆಲವು ವಾರಗಳಲ್ಲಿ ಕಲ್ಲು ತೂರಾಟದ ಹಲವಾರು ಘಟನೆಗಳು ವರದಿಯಾಗಿವೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಮೇ ತಿಂಗಳಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.












Click it and Unblock the Notifications