Airport in Hosur: ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ- ಸಿಎಂ ಸ್ಟಾಲಿನ್
ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭೂಮಿ ಅನ್ವೇಷಣೆಯನ್ನು ಪ್ರಾರಂಭಿಸಿದ ಬೆನ್ನಲ್ಲೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು (ಜೂನ್ 27) ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ್ದಾರೆ.
ಕರ್ನಾಟಕದ ಗಡಿ ಭಾಗದಲ್ಲಿರುವ ಹೊಸೂರಿನಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಬೆಂಗಳೂರು ಹಾಗೂ ವಿವಿಧೆಡೆಯಿಂದ ಆದಾಯದ ಮೂಲವಾದ ಹೊಸೂರಿಗೆ ತೆರಳುವುದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಸ್ಥಳೀಯರು ಇಲ್ಲಿ ವಿಮಾನ ನಿಲ್ದಾಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದ್ದರಿಂದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಉದ್ದೇಶಿತ ವಿಮಾನ ನಿಲ್ದಾಣವನ್ನು 2,000 ಎಕರೆಗಳಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸೂರು ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದನ್ನು ಪ್ರಮುಖ ಆರ್ಥಿಕ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.
ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಮಾಸ್ಟರ್ ಪ್ಲಾನ್ ಮುಕ್ತಾಯದ ಹಂತದಲ್ಲಿದೆ. ಸಾಮಾಜಿಕ ಆರ್ಥಿಕತೆಯನ್ನು ಹೆಚ್ಚಿಸಲು ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಅಭಿವೃದ್ಧಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಸ್ಟಾಲಿನ್ ಹೇಳಿದರು.
ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭೂಮಿಗಾಗಿ ಅನ್ವೇಷಣೆಯನ್ನು ಪ್ರಾರಂಭಿಸಿದ ಈ ಸಂದರ್ಭದಲ್ಲಿ ಸ್ಟಾಲಿನ್ ಈ ಘೋಷಣೆ ಮಾಡಿದ್ದಾರೆ. ಕರ್ನಾಟಕದ ತುಮಕೂರು ರಸ್ತೆಯಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಸಾಧ್ಯತೆಯಿದೆ.

ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕನಿಷ್ಠ 150 ಕಿಲೋಮೀಟರ್ ಅಂತರದಲ್ಲಿ ಇರಬೇಕು. ಆದರೆ ಬೆಂಗಳೂರು ವಿಮಾನ ನಿಲ್ದಾಣ ಹೊಸೂರಿಗೆ 70ರಿಂದ 90 ಕಿಮೀ ದೂರದಲ್ಲಿದೆ. ಹೀಗಾಗಿ ಇದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿರುವ ಖಚಿತ ಮಾಹಿತಿ ಇಲ್ಲ.
ಹೊಸೂರ್ ಎಕ್ಸಿಮ್ ಗೇಟ್‌ವೇಗಳಿಗೆ ಅತ್ಯುತ್ತಮ ಸಂಪರ್ಕವನ್ನು ಹೊಂದಿದೆ. ಚೆನ್ನೈ, ತಿರುವಳ್ಳೂರು, ಶ್ರೀಪೆರಂಬದೂರ್ ಮತ್ತು ಕೊಯಮತ್ತೂರು ಸೇರಿದಂತೆ ಇತರ ಪ್ರಮುಖ ವ್ಯಾಪಾರ ಕೇಂದ್ರಗಳು ಮತ್ತು ಕೈಗಾರಿಕಾ ಕ್ಲಸ್ಟರ್‌ಗಳಿಗೆ ಸಮೀಪದಲ್ಲಿದೆ. ಈ ಪ್ರದೇಶವು ಆಟೋ ಮತ್ತು ಇವಿ ಉತ್ಪಾದನೆ, ಸುಧಾರಿತ ಉತ್ಪಾದನೆ, ಲಾಜಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್, ಮತ್ತು ಕೇಂದ್ರವಾಗಿದೆ. ಯೋಜಿತ ಐಟಿ ಪಾರ್ಕ್‌ನೊಂದಿಗೆ ಐಟಿ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಟಾಟಾ ಎಲೆಕ್ಟ್ರಾನಿಕ್ಸ್, ಟಿವಿಎಸ್, ಅಶೋಕ್ ಲೇಲ್ಯಾಂಡ್, ಟೈಟಾನ್ ಮತ್ತು ರೋಲ್ಸ್ ರಾಯ್ಸ್ (ಐಎಎಂಪಿಎಲ್) ಈ ಪ್ರದೇಶದಲ್ಲಿ ಗಮನಾರ್ಹ ಕಾರ್ಯಾಚರಣೆಗಳನ್ನು ಸ್ಥಾಪಿಸಿವೆ.












Click it and Unblock the Notifications