ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಆಹ್ವಾನ
ಬೆಂಗಳೂರು, ಮೇ 18: ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಅತ್ಯಾಕರ್ಷಕ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಪ್ರಬಲ ನಾಯಕರನ್ನು ಆಹ್ವಾನಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್ ಬರೇಲಿ ಸಂಸದೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಈಗ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ.












Click it and Unblock the Notifications