ಅಮೋನಿಯಾ ಗ್ಯಾಸ್ ಸೋರಿಕೆ ದುರಂತ: ತಮಿಳುನಾಡಿನ ಸೀಫುಡ್ ಕಾರ್ಖಾನೆಯಲ್ಲಿ 7 ಮಹಿಳಾ ಕಾರ್ಮಿಕರು ದುರ್ಮರಣ
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೆರಿಯಪಾಳ್ಯಂ ಬಳಿಯ ಮಂಜಂಗಾರಣೈ ಗ್ರಾಮದಲ್ಲಿ ಭಾನುವಾರ ಭಾರಿ ದುರಂತವೊಂದು ಸಂಭವಿಸಿದೆ. ಇಲ್ಲಿನ ಖಾಸಗಿ ಸೀಫುಡ್ (ಸಮುದ್ರಾಹಾರ) ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಪ್ರಬಲ ಅಮೋನಿಯಾ ಅನಿಲ ಸೋರಿಕೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಏಳು ಮಂದಿ ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
67 ಕಾರ್ಮಿಕರು ಆಸ್ಪತ್ರೆಗೆ ದಾಖಲು
ಗ್ಯಾಸ್ ಸೋರಿಕೆಯಾದ ತಕ್ಷಣವೇ ಕಾರ್ಖಾನೆಯಲ್ಲಿದ್ದ ನೂರಾರು ಸಿಬ್ಬಂದಿ ಉಸಿರಾಟದ ತೊಂದರೆಯಿಂದ ತತ್ತರಿಸಿದ್ದಾರೆ. ಅಸ್ವಸ್ಥಗೊಂಡ ಒಟ್ಟು 67 ಕಾರ್ಮಿಕರನ್ನು ತಕ್ಷಣವೇ ಸ್ಥಳೀಯ ವಿವಿಧ ವೈದ್ಯಕೀಯ ಕೇಂದ್ರಗಳು ಮತ್ತು ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಎಸ್. ಕವಿತಾ ಅವರು ಮಾಹಿತಿ ನೀಡಿದ್ದಾರೆ.

ವಿಷಾನಿಲ ಸೋರಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಹಾಗೂ ರಕ್ಷಣಾ ಸೇವೆಗಳ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಕಾರ್ಖಾನೆಯೊಳಗೆ ಸಿಲುಕಿದ್ದ ಇತರ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಗ್ಯಾಸ್ ಸೋರಿಕೆಗೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ತನಿಖೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಿಗೆ ಪರಿಹಾರ ಘೋಷಣೆ
ಈ ದುರಂತಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಂತಾಪ ಸೂಚಿಸಿದ್ದಾರೆ. ಅಧಿಕೃತ ಪ್ರಕಟಣೆಯ ಪ್ರಕಾರ, ಕಾರ್ಖಾನೆಯ ಪ್ರೊಡಕ್ಷನ್ ವಿಭಾಗದಲ್ಲಿ ಅನಿರೀಕ್ಷಿತವಾಗಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಒಟ್ಟು 64 ಕಾರ್ಮಿಕರು ಇದರ ತೀವ್ರತೆಗೆ ತುತ್ತಾಗಿದ್ದಾರೆ. ಈ ಪೈಕಿ ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಸಾವಿಗೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ವಿಜಯ್ ಅವರು, ಮುಖ್ಯಮಂತ್ರಿಯವರ ಸಾರ್ವಜನಿಕ ಪರಿಹಾರ ನಿಧಿಯಿಂದ (CMPRF) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ಇದರೊಂದಿಗೆ, ಮೃತದೇಹಗಳನ್ನು ಸರ್ಕಾರಿ ವೆಚ್ಚದಲ್ಲೇ ಅವರ ಸ್ವಂತ ರಾಜ್ಯಗಳಿಗೆ (ಒಡಿಶಾ) ರವಾನಿಸಲು ಮತ್ತು ಅಂತ್ಯಸಂಸ್ಕಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
15 ಕಾರ್ಮಿಕರನ್ನು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ತೀವ್ರ ನಿಗಾದಲ್ಲಿ ಇರಿಸಲಾಗಿದೆ. 23 ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 24 ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ವೈದ್ಯರ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.
ಈ ಗಂಭೀರ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸಿಎಂ ವಿಜಯ್, ತಕ್ಷಣವೇ ತನಿಖೆಗೆ ಆದೇಶಿಸಿದ್ದಾರೆ. ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ನಿರ್ದೇಶನಾಲಯ, ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯ ಹಾಗೂ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ (TNPCB) ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು, 24 ಗಂಟೆಗಳ ಒಳಗೆ ಪ್ರಾಥಮಿಕ ವರದಿಯನ್ನು ಹಾಗೂ 3 ದಿನಗಳ ಒಳಗೆ ಸಂಪೂರ್ಣ ಸಮಗ್ರ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನೌಕರರ ರಾಜ್ಯ ವಿಮಾ (ESI) ಯೋಜನೆ ಮತ್ತು ಕಾರ್ಮಿಕರ ಪರಿಹಾರ ಕಾಯ್ದೆಯಡಿ ಸಂತ್ರಸ್ತ ಕಾರ್ಮಿಕರಿಗೆ ಹಾಗೂ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ದುರಂತಗಳು ಮರುಕಳಿಸದಂತೆ ತಡೆಯಲು ರಾಜ್ಯಾದ್ಯಂತ ಇರುವ ಎಲ್ಲ ಅಪಾಯಕಾರಿ ಕೈಗಾರಿಕೆಗಳ ಜಂಟಿ ತಪಾಸಣೆ ನಡೆಸುವಂತೆಯೂ ಆದೇಶ ಹೊರಡಿಸಿದ್ದಾರೆ.












Click it and Unblock the Notifications