ಕಾಂಗ್ರೆಸ್ ಸೇರ್ಪಡೆ ಸುದ್ದಿ ಬೆನ್ನಲ್ಲೇ ಪ್ರಧಾನಿ ಮೋದಿ ಭೇಟಿಯಾದ ತೇಜಸ್ವಿನಿ ಅನಂತಕುಮಾರ್
ನವದೆಹಲಿ, ಜುಲೈ 21: ಬಿಜೆಪಿಯ ಹಿರಿಯ ನಾಯಕ ದಿವಂಗತ ಅನಂತಕುಮಾರ್ ಪತ್ನಿ, ತೇಜಸ್ವಿನಿ ಅನಂತಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾಗ ಭೇಟಿ ಮಾಡಿ ಮಾತುಕತೆ ನಡೆಸಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
2024 ಲೋಕಸಭಾ ಚುನಾವಣೆ ಹಿನ್ನೆಲೆ ತೇಜಸ್ವಿನಿ ಅನಂತಕುಮಾರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ , ಪ್ರಧಾನಿ ನರೇಂದ್ರ ಮೋದಿ ಅವರನ್ನ ದೆಹಲಿಯಲ್ಲಿ ಭೇಟಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಈಗಾಗಲೇ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದು, ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಬಿಜೆಪಿಯಲ್ಲೇ ಇರುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ಅವರ ಸ್ಥಾನವನ್ನ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರವನ್ನ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಟಿಕೆಟ್ ನೀಡಿತ್ತು. ಇತ್ತ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತೊರೆದಿರುವ ಬಿಜೆಪಿ ನಾಯಕರು, ತೇಜಸ್ವಿನಿ ಅವರನ್ನು ಕಾಂಗ್ರೆಸ್ ಸೇರುವಂತೆ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್, ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿಯನ್ನ ನಡೆಸುತ್ತಿದ್ದು, ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿದೆ. ಲೋಕಸಭಾ ಚುನಾವಣೆಯ ಬಳಿಕ ಬಿಬಿಎಂಪಿ ಚುನಾವಣೆಯ ಲೆಕ್ಕಾಚಾರವನ್ನ ಹಾಕಿಕೊಂಡಿರುವ ಕೈ ಪಡೆ, ಬೆಂಗಳೂರು ಭಾಗದಲ್ಲಿ ಕನಿಷ್ಠ ಎರಡು ಕ್ಷೇತ್ರಗಳನಾದ್ರೂ ಗೆಲ್ಲುವ ತಂತ್ರಗಾರಿಕೆಯನ್ನ ಹಾಕಿಕೊಂಡಿದೆ.
ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಬಿಜೆಪಿ ಭದ್ರಕೋಟೆಗಳನ್ನು ವಶಪಡಿಸಿಕೊಳ್ಳುವ ಸವಾಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದು, ಬಿಜೆಪಿಯ ಪ್ರಭಾವಿ ಸಂಸದರ ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಸೆಂಟ್ರಲ್ನಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಚರ್ಚೆ ನಡೆದಿದ್ದು, ತೇಜಸ್ವಿನಿ ಅನಂತ್ ಕುಮಾರ್ ಅವರನ್ನ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.
ಇನ್ನೂ ಚುನಾವಣೆ ಹತ್ತಿರವಾಗುತ್ತಿದ್ದಂತೆ ತೇಜಸ್ವಿನಿ ಅನಂತ್ ಕುಮಾರ್ ಅವರು ಮೋದಿ ಅವರನ್ನ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಬಾರೀ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications