Telangana Result: ಕಾಂಗ್ರೆಸ್ ಅಧ್ಯಕ್ಷರ ಮನೆಗೆ ಬಿಗಿ ಭದ್ರತೆ!
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದರೆ, ಕಾಂಗ್ರೆಸ್ ತೆಲಂಗಾಣದಲ್ಲಿ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಈಗಾಗಲೇ 66 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.

ರೇವಂತ್ ರೆಡ್ಡಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದು, ಕಾಂಗ್ರೆಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಗೆಲುವಿನ ಸಾಧ್ಯತೆ ಹೆಚ್ಚುತ್ತಿರುವ ಬೆನ್ನಲ್ಲೇ ಅಭಿಮಾನಿಗಳು, ಕಾರ್ಯಕರ್ತರು ರೇವಂತ್ ರೆಡ್ಡಿ ಮನೆಯತ್ತ ಬರುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ
ರೇವಂತ್ ಸ್ಪರ್ಧಿಸಿರುವ ಕೊಡಂಗಲ್ ಮತ್ತು ಕಾಮರೆಡ್ಡಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಮರೆಡ್ಡಿ ಕ್ಷೇತ್ರದಲ್ಲಿ ಸಿಎಂ ಕೆ. ಚಂದ್ರಶೇಖರ್ ರಾವ್ ಕೂಡ ಸ್ಪರ್ಧಿಸಿದ್ದು, ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಬಹುಮತದತ್ತ ಸಾಗುತ್ತಿರುವ ಹಿನ್ನಲೆಯಲ್ಲಿ ರೇವಂತ್ ರೆಡ್ಡಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರೇವಂತ್ ರೆಡ್ಡಿ ಮನೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರೇವಂತ್ ಮನೆಗೆ ಕಾರ್ಯಕರ್ತರು ಜಮಾಯಿಸಿದ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ ಎಂದು ತಿಳಿದ ನಂತರ ರೇವಂತ್ ರೆಡ್ಡಿ ಮನೆಗೆ ಭಾರೀ ಭದ್ರತೆ ಏರ್ಪಡಿಸಲಾಗಿತ್ತು. ಶನಿವಾರ ರೇವಂತ್ ಮನೆಗೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಹಿಂದೆಂದಿಗಿಂತಲೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೇವಂತ್ ಹಿಂಬಾಲಕರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ. ರೇವಂತ್ ಮನೆಯಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಆರಂಭವಾಗಿದೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಹೈದರಾಬಾದ್‌ನಲ್ಲಿದ್ದು ಫಲಿತಾಂಶವನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಕರ್ನಾಟಕ ಸಚಿವರು ಕೂಡ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಚುನಾವಣಾ ಫಲಿತಾಂಶ ತೆಲಂಗಾಣ ರಾಜಕೀಯದ ಮೇಲೆ ಪ್ರಭಾವ ಬೀರಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ತೆಲಂಗಾಣ ರಾಜ್ಯ ಸ್ಥಾಪನೆಯಾದ ನಂತರ ಎರಡು ಬಾರಿ ಅಧಿಕಾರಕ್ಕೆ ಬಂದಿದ್ದ ಕೆ. ಚಂದ್ರಶೇಖರ ರಾವ್ ಅವರ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. ಇನ್ನು ಮತ ಎಣಿಕೆ ನಡೆಯುತ್ತಿದ್ದು, ಸಂಜೆ ವೇಳೆಗೆ ನಿಖರ ಅಂಶಗಳು ಸಿಗಲಿವೆ.












Click it and Unblock the Notifications