ನಿವೃತ್ತಿನಂತರ ಕಾಂಗ್ರೆಸ್ ಪರ ಬ್ಯಾಟ್ ಬೀಸಲಿರುವ ಸಚಿನ್
ಭೋಪಾಲ್, ಅಕ್ಟೋಬರ್ 26: ನಿವೃತ್ತಿ ಹೊಸ್ತಿಲಲ್ಲಿರುವ ಭಾರತೀಯ ಕ್ರಿಕೆಟ್ ರಂಗದ ದಂತಕತೆ ಸಚಿನ್ ತೆಂಡೂಲ್ಕರ್ ಅವರು ರಾಜಕೀಯಕ್ಕೆ ಧುಮಕಲಿದ್ದು, ಕಾಂಗ್ರೆಸ್ ಪಕ್ಷದ ಪರ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮಧ್ಯ ಪ್ರದೇಶದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪರ ಪ್ರಚಾರ ಮಾಡುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ಸಚಿನ್ ಬಯಸಿದ್ದಾರೆಂದು ಮೂಲಗಳು ತಿಳಿಸಿವೆ. ಗಮನಾರ್ಹವೆಂದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದ ವರ್ಷ ಸಚಿನ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

ಕ್ರಿಕೆಟ್ ದೇವರು ಎಂದೇ ಹೆಸರಾಗಿರುವ ಸಚಿನ್ ಮಧ್ಯಪ್ರದೇಶದಲ್ಲಿ ನಡೆಯುವ 9 ಚುನಾವಣೆ ಸಂಬಂಧಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕ ಪ್ರಮೋದ್ ಗುಗಾಲಿಯಾ ಮಾಹಿತಿಯನ್ನು ನೀಡಿದ್ದಾರೆ. ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಸಚಿನ್ ಅವರನ್ನು ಕೋರುವುದಾಗಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಚಿನ್ ಅವರು ಪ್ರಚಾರದಲ್ಲಿ ಭಾಗವಹಿಸಲು ಕಾಂಗ್ರೆಸ್ ಒಪ್ಪಿಗೆ ನೀಡಿದೆ. ಸಚಿನ್ ಅವರ ಜನಪ್ರಿಯತೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ ಯಾಚನೆಗೆ ಮುಂದಾಗಿದೆ. ಮಧ್ಯಪ್ರದೇಶದಲ್ಲಿ ಸುಮಾರು 1 ಕೋಟಿ ಯುವಜನತೆ ಮತ ಚಲಾಯಿಸಲಿದ್ದಾರೆ ಎಂದು ಪ್ರಮೋದ್ ತಿಳಿಸಿದ್ದಾರೆ.
ಮುಂದಿನ ತಿಂಗಳು ನವೆಂಬರ್ 14ರಂದು ವೆಸ್ಟ್ ಇಂಡೀಸ್ ವಿರುದ್ಧ ಸಚಿನ್ ತೆಂಡೂಲ್ಕರ್ ತಮ್ಮ ಅಂತಿಮ 200ನೇ ಟೆಸ್ಟ್ ಪಂದ್ಯವನ್ನಾಡಲಿದ್ದು, ನಿವೃತ್ತಿ ಹೊಂದಲಿದ್ದಾರೆ. ಆ ಬಳಿಕ ನವೆಂಬರ್ 25ರಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications