Jammu & Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ; ಓರ್ವ ವೈದ್ಯ ಸೇರಿ 6 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕಗಳ ಬಳಿಕ ವಿಧಾನಸಭಾ ಚುನಾವಣೆ ನಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಭಯೋತ್ಪಾದ ದಾಳಿ ನಡೆದಿದೆ. ಭಾನುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಾಂಗೀರ್‌ನಲ್ಲಿ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ವೈದ್ಯ ಮತ್ತು ಐವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಗುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯೊಂದರ ಕೆಲಸಗಾರರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಮಾಡಿದ ಭಯೋತ್ಪಾಕರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸೇನೆಯು ಘಟನಾ ಸ್ಥಳವನ್ನು ಸುತ್ತುವರೆದಿದ್ದು, ಹುಡುಕಾಟ ಆರಂಭಿಸಿದೆ.

ಘಟನೆ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೋಲೀಸರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದಾರೆ. "ಗಗನ್‌ಗೀರ್, ಗಂದರ್‌ಬಾಲ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು" ಎಂದು ಹಂಚಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಖಂಡನೆ
ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘಟನೆಯನ್ನು ಖಂಡಿಸಿದ್ದಾರೆ. ಸ್ಥಳೀಯರಲ್ಲದ, ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕರ ಮೇಲೆ ದಾಳಿ ಮಾಡಿರುವುದನ್ನು ಹೇಡಿತನ ಎಂದು ಕರೆದಿದ್ದಾರೆ. "ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಶ್ರೀನಗರದ ಎಸ್‌ಕೆಐಎಂಎಸ್ (SKIMS) ಆಸ್ಪತ್ರೆಗೆ ದಾಳಿಸಲಾಗಿದೆ. ಗಾಯಾಳುಗಳು ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಒಮರ್ ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಘಟನೆಯನ್ನು ಖಂಡಿಸಿದ್ದು, ಕೆಲಸ ಮಾಡುತ್ತಿದ್ದ ಮುಗ್ದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದಿದ್ದಾರೆ. "ಜಮ್ಮು ಮತ್ತು ಕಾಶ್ಮೀರದಲ್ಲಿ ಗಗಾಂಗೀರ್, ಸೋನಾಮಾರ್ಗ್‌ನಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅಮಾಯಕ ಕಾರ್ಮಿಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ" ಎಂದು ಗಡ್ಕರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಇಂತಹ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಈ ಭಯೋತ್ಪಾದಕ ದಾಳಿ ನಡೆದಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಯಾವ ರೀತಿಯ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ನೋಡಬೇಕಿದೆ.












Click it and Unblock the Notifications