Jammu & Kashmir: ಅತಂತ್ರ ಫಲಿತಾಂಶ ಸೂಚನೆ; ಪಕ್ಷೇತರ, ಸಣ್ಣ ಪಕ್ಷಗಳ ಮೇಲೆ ಕಣ್ಣಿಟ್ಟ ಬಿಜೆಪಿ
ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ಅಕ್ಟೋಬರ್ 5 ರಂದು ಹೊರಬಿದ್ದ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್- ಎನ್‌ಸಿ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗೆದ್ದರೂ, ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿದೆ.
ಅತಂತ್ರ ಫಲಿತಾಂಶ ಸೂಚನೆ ಬೆನ್ನಲ್ಲೇ ಬಿಜೆಪಿ ಅಲರ್ಟ್ ಆಗಿದೆ. ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿಗೆ ಹಿನ್ನಡೆಯಾದರೂ, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದು ಕಷ್ಟ ಎನ್ನಲಾದ ಕಾರಣ, ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಮಾಡುವ ಸಾಧ್ಯತೆ ದಟ್ಟವಾಗಿದೆ. ಹಲವು ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿಯೇ ಸರ್ಕಾರ ರಚನೆ ಮಾಡಿರುವ ಬಿಜೆಪಿಗೆ ಇಂತಹದ್ದೇ ದಾರಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಹುಡುಕುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ.

ಸಿವೋಟರ್ ಸಮೀಕ್ಷೆಯ ಪ್ರಕಾರ 95 ಶಾಸಕರ ಬಲವನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ - ಕಾಂಗ್ರೆಸ್ ಮೈತ್ರಿಕೂಟ 40-48 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಬಿಜೆಪಿ 27-32 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.
ಬಿಜೆಪಿ ಲೆಕ್ಕಾಚಾರವೇನು?
ಅತಂತ್ರ ಫಲಿತಾಂಶದ ಸೂಚನೆ ಬೆನ್ನಲ್ಲೇ ಬಿಜೆಪಿ ಈಗ ಸರ್ಕಾರ ರಚನೆಗೆ ಪರ್ಯಾಯ ಸಾಧ್ಯತೆಗಳತ್ತ ನೋಡುತ್ತಿದೆ. ಈಗಾಗಲೇ ಬಿಜೆಪಿ ನಾಯಕರು ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರ ಸಣ್ಣ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೆಲವು ಸಣ್ಣ ಪಕ್ಷಗಳಿಗೆ ಪರೋಕ್ಷವಾಗಿ ಬೆಂಬಲ ಕೊಟ್ಟಿತ್ತು ಎಂದು ಹೇಳಲಾಗಿದೆ.
2014ರ ವಿಧಾನಸಭಾ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಿತ್ತು, ಆದರೆ ಈ ಬಾರಿ ಚುನಾವಣೆಯಲ್ಲಿ ಕೇವಲ 62 ಸ್ಥಾನಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜಮ್ಮು ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೊಂದಿದ್ರೂ, ಕಾಶ್ಮೀರ ಕಣಿವೆಯಲ್ಲಿ ಬಿಜೆಪಿ ಗೆಲುವಿನ ಲೆಕ್ಕಾಚಾರ ತಲೆಕೆಳಗಾಗಿದೆ. 2014ರ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಪ್ರಾಂತ್ಯದ 43 ವಿಧಾನಸಭಾ ಕ್ಷೇತ್ರಗಳ ಪೈಕಿ 25 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಏನಾದರೂ ಜಮ್ಮು ಭಾಗದ ಮತದಾರ ಬಿಜೆಪಿ ಕೈಹಿಡಿದರೆ ಸರ್ಕಾರ ರಚನೆ ಕನಸು ನನಸಾಗಬಹುದು.
ಒಂದು ವೇಳೆ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಸ್ವತಂತ್ರ ಅಭ್ಯರ್ಥಿಗಳು ಮತ್ತು ಸಣ್ಣ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚನೆ ಮಾಡಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಸ್ವತಂತ್ರ ಅಭ್ಯರ್ಥಿಗಳು ಮಾತ್ರವಲ್ಲದೆ, ಕಾಂಗ್ರೆಸ್, ಎನ್‌ಸಿ ಪಕ್ಷದ ಶಾಸಕರ ಮೇಲೂ ಬಿಜೆಪಿ ಕಣ್ಣಿಟ್ಟಿದ್ದು, ಆಪರೇಷನ್ ಕಮಲದ ಬಗ್ಗೆ ಕೂಡ ಯೋಚಿಸಬಹುದು. ಒಂದು ವೇಳೆ ಹಾಗೇನಾದರೂ ಆದರೆ, ಕಣಿವೆ ರಾಜ್ಯದಲ್ಲಿ ಕೂಡ ರೆಸಾರ್ಟ್ ರಾಜಕೀಯ ನಾಟಕವನ್ನು ನೋಡಬಹುದಾಗಿದೆ.












Click it and Unblock the Notifications