Liquor: ಕಳ್ಳಭಟ್ಟಿ ದುರಂತಕ್ಕೆ ಬೆಚ್ಚಿಬಿದ್ದ ಮಹಾರಾಷ್ಟ್ರ 15 ಜನ ಸಾವು: ಪ್ರಮುಖ ನಗರದಲ್ಲಿ ಅಲರ್ಟ್
Liquor: ನೆರೆಯ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶ ಹಾಗೂ ಪುಣೆಯ ವಿವಿಧ ಪ್ರದೇಶಗಳಲ್ಲಿ ಕಳ್ಳ ಭಟ್ಟಿ (ಕಲಬೆರಕೆ ಮದ್ಯ) ಸೇವನೆಯಿಂದ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪಿಂಪ್ರಿ-ಚಿಂಚ್‌ವಾಡ್‌ನ ದಪೋಡಿ ಮತ್ತು ಫುಗೆವಾಡಿ ಪ್ರದೇಶಗಳಲ್ಲಿ ಎಂಟು ಜನ ಮೃತಪಟ್ಟಿದ್ದಾರೆ. ಇನ್ನು ಪುಣೆಯ ಕಾಲೆ ಪದಲ್ ಪ್ರದೇಶದಲ್ಲಿ ಇನ್ನೂ ಮೂವರು ಸಾವನ್ನಪ್ಪಿದ್ದರೆ. ಹಡಪ್ಸರ್ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 15ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿಯೇ ಕಳ್ಳ ಭಟ್ಟಿ ಸೇವಿಸಿ ಹಲವರು ಮೃತಪಟ್ಟಿರುವುದು ಭಾರೀ ಆತಂಕ್ಕೆ ಕಾರಣವಾಗಿದೆ. ಸಾವಿನ ಸಂಖ್ಯೆಯು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.
ಇನ್ನು ಅಕ್ರಮ ಮದ್ಯ ಮಾರಾಟದಲ್ಲಿ ಭಾಗಿಯಾಗಿದ್ದಾನೆಂದು ಹೇಳಲಾಗುವ ಯೋಗೇಶ್ ವಾಂಖೆಡೆ ಈ ನಕಲಿ ಮದ್ಯವನ್ನು ತಯಾರಿಸಿದ್ದಾನೆ ಎಂದು ಹೇಳಲಾಗಿದೆ. ಯೋಗೇಶ್ ವಿರುದ್ಧ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಕಳ್ಳಭಟ್ಟಿ ದುರಂತದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ. ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಆಯುಕ್ತರಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

Liquor: ಪ್ರಮುಖ ನಗರಗಳಲ್ಲಿ ಅಲರ್ಟ್
ಈ ದುರಂತಕ್ಕೆ ಕಾರಣರಾದ ಯಾರನ್ನೂ ಬಿಡಬೇಡಿ. ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಪಡೆಗಳಿಗೆ ಸೂಚನೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಪ್ರಸ್ತುತ ದಾಳಿಗಳು ನಡೆಯುತ್ತಿವೆ.
ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 8 ಜನರನ್ನು ಬಂಧಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ. ಅಬಕಾರಿ ಇಲಾಖೆಯೂ ತನಿಖೆಯಲ್ಲಿ ಕೈಜೋಡಿಸಿದೆ ಎಂದು ಹೇಳಲಾಗಿದೆ.












Click it and Unblock the Notifications