ಉತ್ತರಾಖಂಡ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ; ರಾಮ್‌ನಗರದಿಂದ ಹರೀಶ್ ರಾವತ್ ಸ್ಪರ್ಧೆ
ಡೆಹ್ರಾಡೂನ್, ಜನವರಿ 25: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ, ಪ್ರಚಾರದಲ್ಲಿ ನಿರತವಾಗಿವೆ.
ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಚುನಾವಣೆ ಎದುರಿಸಲು ಸನ್ನದ್ಧವಾಗಿದ್ದು, ಅದರಲ್ಲೂ ವಿಪಕ್ಷ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ.
ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 11 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ರಾಮ್‌ನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರನ್ನು ಕಣಕ್ಕಿಳಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಮುಖ್ಯಸ್ಥರಾಗಿರುವ ಹರೀಶ್ ರಾವತ್ ಅವರು 2017ರ ವಿಧಾನಸಭಾ ಚುನಾವಣೆಯಲ್ಲಿ ಹರಿದ್ವಾರ-ಗ್ರಾಮೀಣ ಮತ್ತು ಕಿಚ್ಚ ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಿ ಸೋತಿದ್ದರು.
ಕಳೆದ ಶುಕ್ರವಾರ ಬಿಜೆಪಿಯಿಂದ ಕಾಂಗ್ರೆಸ್‌ಗೆ ಮರಳಿದ ಹರಕ್ ಸಿಂಗ್ ರಾವತ್ ಅವರ ಸೊಸೆ ಅನುಕೃತಿ ಗುಸೇನ್ ರಾವತ್ ಅವರನ್ನು ಕಾಂಗ್ರೆಸ್ ಲಾನ್ಸ್‌ಡೌನ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಆದರೆ ಹರಕ್ ಸಿಂಗ್ ರಾವತ್ ಅವರು ಯಾವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದನ್ನು ಪಕ್ಷವು ಇಲ್ಲಿಯವರೆಗೆ ನಿರ್ಧರಿಸಿಲ್ಲ ಮತ್ತು ಇನ್ನೂ ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ.
ಇದರೊಂದಿಗೆ ಶನಿವಾರ ರಾತ್ರಿ 53 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ, ಪಕ್ಷವು ಈವರೆಗೆ 64 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಉತ್ತರಾಖಂಡ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋಡಿಯಾಲ್ ಅವರನ್ನು ಶ್ರೀನಗರ ಕ್ಷೇತ್ರದಿಂದ ಮತ್ತು ಹೊರಹೋಗುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರೀತಮ್ ಸಿಂಗ್ ಅವರನ್ನು ಚಕ್ರತಾ (ಎಸ್ಟಿ) ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಯಶ್‌ಪಾಲ್ ಆರ್ಯ ಅವರು ತಮ್ಮ ಬಾಜ್‌ಪುರ-ಎಸ್‌ಸಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಇನ್ನು ಯಶ್‌ಪಾಲ್ ಆರ್ಯ ಪುತ್ರ ಸಂಜೀವ್ ಆರ್ಯ ಕೂಡ ನೈನಿತಾಲ್ (SC) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅವರು ತಮ್ಮ ತಂದೆ ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ಅವರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.
ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.












Click it and Unblock the Notifications