ಉತ್ತರಾಖಂಡ; ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಕಾಶಿ, ನವೆಂಬರ್ 12; ಉತ್ತರಾಖಂಡ ರಾಜ್ಯದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದೆ. ಸುರಂಗ ಮಾರ್ಗ ಕಾಮಗಾರಿಯಲ್ಲಿ ತೊಡಗಿದ್ದ 40 ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆ ಇದೆ. ಕಾರ್ಮಿಕರನ್ನು ರಕ್ಷಣೆ ಮಾಡಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಉತ್ತರಕಾಶಿಯಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತಿತ್ತು. ಭಾನುವಾರ ಮುಂಜಾನೆ ಈ ಸುರಂಗ ಮಾರ್ಗದ ಒಂದು ಬದಿ ಕುಸಿದು ಬಿದ್ದಿದೆ. ಕಾರ್ಮಿಕರು ಒಳಗೆ ಸಿಲುಕಿದ್ದಾರೆ.

ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಮಾಡುತ್ತಿದ್ದ ಸುಮಾರು ನಾಲ್ಕೂವರೆ ಕಿ. ಮೀ. ಉದ್ದದ ಸುರಂಗ ಮಾರ್ಗದ 150 ಮೀಟರ್‌ನಷ್ಟು ಕುಸಿತವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ರಕ್ಷಣಾ ಕಾರ್ಯ ಚುರುಕು; ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಸುರಂಗ ಮಾರ್ಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದಾರೆ. ಉತ್ತರಕಾಶಿ ಜಿಲ್ಲಾ ಎಸ್‌ಪಿ ಅರ್ಪಣ್ ಯದುವಂಶಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಸುರಂಗ ಮಾರ್ಗ ನಿರ್ಮಾಣ ಕಾರ್ಯದಲ್ಲಿ 40 ಕಾರ್ಮಿಕರು ತೊಡಗಿದ್ದರು. ಸುರಂಗ ಕುಸಿದು ಬಿದ್ದಿರುವ ಮಣ್ಣನ್ನು ತೆರವುಗೊಳಿಸಿ ಕಾರ್ಮಿಕರನ್ನು ತಲುಪಲು ಪ್ರಯತ್ನ ನಡೆಸಲಾಗುತ್ತಿದೆ. ಪೈಪ್‌ಗಳ ಮೂಲಕ ಕಾರ್ಮಿಕರು ಇರುವ ಸ್ಥಳಕ್ಕೆ ಆಮ್ಲಜನಕವನ್ನು ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.
ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಎರಡು ಅಥವ ಮೂರು ದಿನ ಬೇಕು ಎಂದು ಅಂದಾಜಿಸಲಾಗಿದೆ. ಘಟನೆ ಕುರಿತು ಕೇಂದ್ರ ಸರ್ಕಾರಕ್ಕೆ ಸಹ ಮಾಹಿತಿ ನೀಡಲಾಗಿದ್ದು, ಅಗತ್ಯ ನೆರವು ನೀಡಲು ಸಹ ರಾಜ್ಯ ಸರ್ಕಾರ ಮನವಿ ಮಾಡಿದೆ. ಕೇಂದ್ರ ಸರ್ಕಾರ ಸಹ ರಾಜ್ಯದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆ ಕುರಿತು ಮಾತನಾಡಿದ್ದಾರೆ, "ಅಧಿಕಾರಿಗಳ ತುರ್ತು ಸಭೆಯನ್ನು ನಡೆಸಿ ಮಾಹಿತಿ ಸಂಗ್ರಹ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.
"ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ" ಎಂದರು.
"ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ವಾಪಸ್ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಸ್‌ಡಿಆರ್‌ಎಫ್ ಪಡೆ ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಕಾರ್ಮಿಕರನ್ನು ತಲುಪಲು ಎಷ್ಟು ಮಣ್ಣನ್ನು ತೆಗೆಯಬೇಕು? ಎಂಬುದರ ಬಗ್ಗೆ ಎಸ್‌ಡಿಆರ್‌ಎಫ್ ಯಾವುದೇ ಮಾಹಿತಿ ನೀಡಿಲ್ಲ.












Click it and Unblock the Notifications