ವಿರೋಧ ಪಕ್ಷಗಳ ಸಭೆಗೂ ಮೊದಲು ಕಾಂಗ್ರೆಸ್ ಮಹತ್ವದ ಘೋಷಣೆ!
ಬೆಂಗಳೂರು, ಜುಲೈ 16; ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೂ ಮೊದಲು ಕಾಂಗ್ರೆಸ್ ಪಕ್ಷ ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಜುಲೈ 18ರಂದು ಸಭೆ ನಡೆಯಲಿದ್ದು, ಇದಕ್ಕೂ ಮೊದಲು ಜುಲೈ 17ರಂದು ವಿರೋಧ ಪಕ್ಷದ ನಾಯಕರಿಗೆ ಔತಣ ಕೂಟವನ್ನು ಆಯೋಜನೆ ಮಾಡಲಾಗಿದೆ.
ವಿರೋಧ ಪಕ್ಷದ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸುವ ಕುರಿತು ಇನ್ನೂ ಯಾವುದೇ ತೀರ್ಮಾನ ಪ್ರಕಟವಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷದ ಮಾಡಿರುವ ಈ ಘೋಷಣೆ, ವಿರೋಧ ಪಕ್ಷಗಳ ಒಗ್ಗಟ್ಟಿಗೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.

ಭಾನುವಾರ ಪಿಟಿಐ ಜೊತೆ ಮಾತನಾಡಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, "ದೆಹಲಿಯ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆಯನ್ನು ನಾವು ಬೆಂಬಲಿಸುವುದಿಲ್ಲ. ಎಎಪಿ ನಾಳೆ ನಡೆಯವ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು" ಎಂದು ಹೇಳಿದ್ದಾರೆ.
ಪಂಜಾಬ್ ಮತ್ತು ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿ ಪಕ್ಷ ದೆಹಲಿಯ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿತ್ತು. ಆದ್ದರಿಂದ ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಮೊದಲ ಸಭೆಯಿಂದ ಹೋರ ಹೋಗಿತ್ತು.
ಬೆಂಗಳೂರಿನ ಸಭೆಗೆ ಗೈರು?; ಆಮ್ ಆದ್ಮಿ ಪಕ್ಷದ ಉನ್ನತ ಮಟ್ಟದ ನಾಯಕರ ಮನವೊಲಿಕೆ ಮಾಡುವ ಕಾರ್ಯವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಜುಲೈ 18ರಂದು ಬೆಂಗಳೂರಿನಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಯಾವುದೇ ನಾಯಕರು ಇನ್ನೂ ಅಂತಿಮ ತೀರ್ಮಾನವನ್ನು ಪ್ರಕಟಿಸಿಲ್ಲ.
ಜೂನ್ 23ರಂದು ಬಿಹಾರದ ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಮೊದಲ ಸಭೆಯಲ್ಲಿ ಎಎಪಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾದರೆ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ತಂಡದ ನೇತೃತ್ವದಲ್ಲಿ ಸರಿಯಾಗಿ ಕೆಲಸ ಮಾಡಬೇಕು ಎಂದು ಹೇಳಿತ್ತು.
ದೆಹಲಿಯ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿಚಾರದಲ್ಲಿ ಕಾಂಗ್ರೆಸ್ ಹೊರತುಪಡಿಸಿ ಇತರ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಎಎಪಿ ಬೆಂಬಲಿಸುವುದಾಗಿ ಹೇಳಿದ್ದವು. ಆದರೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಬೇಡಿಕೆ ಇಟ್ಟಿದ್ದ ಎಎಪಿ ಪಾಟ್ನಾದಲ್ಲಿನ ಸಭೆಯಿಂದ ಹೊರಹೋಗಿತ್ತು. ಕಾಂಗ್ರೆಸ್ ನಿಲುವು ಹೇಳುವ ತನಕ ಮತ್ತೆ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿತ್ತು.
ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆಗೆ ತಯಾರಿ ನಡೆದಿದೆ. ಒಟ್ಟು 24 ವಿರೋಧ ಪಕ್ಷಗಳು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಸಭೆಗೆ ಮೊದಲು ಜುಲೈ 17ರಂದು ಸೋನಿಯಾ ಗಾಂಧಿ ವಿರೋಧ ಪಕ್ಷಗಳ ನಾಯಕರಿಗೆ ಔತಣ ಕೂಟ ಏರ್ಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಹ ಔತಣ ಕೂಟಕ್ಕೆ ಗೈರಾಗಲಿದ್ದಾರೆ. ಆದರೆ ಅವರು ಜುಲೈ 18ರಂದು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷ ಮಾಹಿತಿ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸಭೆಯನ್ನು ಯಶಸ್ವಿಗೊಳಿಸಲು ತಯಾರಿ ನಡೆಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಕಾಂಗ್ರೆಸ್ ಘೋಷಣೆ ಬಳಿಕ ಎಎಪಿಯ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications