ಸರ್ಕಾರ ಅಸ್ಥಿರಗೊಳಿಸಲು ಫ್ಲ್ಯಾನ್; ಕಾಂಗ್ರೆಸ್ ಹೈಕಮಾಂಡ್ ನಾಯಕರ ಮುಂದೆ ಸಿದ್ದರಾಮಯ್ಯ ಹೇಳಿದ್ದೇನು?
ನವದೆಹಲಿ, ಜುಲೈ 30: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ಮೂಡಾ ಹಾಗೂ ವಾಲ್ಮೀಕಿ ಹಗರಣದ ಕುರಿತು ಸಮರ ಸಾರಿದ್ದು, ಸಿದ್ದರಾಮಯ್ಯ ಸರ್ಕಾರಕ್ಕೆ ಈ ಎರಡು ಪ್ರಕರಣಗಳು ದೊಡ್ಡ ತಲೆನೋವಾಗಿದೆ. ಈಗಾಗಲೇ ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿಎಂ ಸ್ಥಾನದ ಆಕಾಂಕ್ಷಿಗಳೇ ಪ್ರಯತ್ನ ನಡೆಸಿದ್ದಾರೆ ಎಂದು ವಿಪಕ್ಷಗಳು ಹೊಸ ಬಾಂಬ್ ಹಾಕಿದ್ದು, ಹೈಕಮಾಂಡ್ ನಾಯಕ ಬುಲಾವ್ ಮೇರೆಗೆ ಸಿಎಂ, ಡಿಸಿಎಂ ಕೈ ನಾಯಕರನ್ನ ಭೇಟಿಯಾಗಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭೇಟಿಯಾಗಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಕೇಳಿಬಂದಿರುವ ಹಗರಣಗಳ ಬಗ್ಗೆ ಚರ್ಚಿಸಿದ್ದಾರೆ. ಮುಡಾ ಹಾಗೂ ವಾಲ್ಮೀಕಿ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಸಿದ್ದರಾಮಯ್ಯ ಅವರು ಮಾತನಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ. ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ.
ಪರಿಶಿಷ್ಠ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.












Click it and Unblock the Notifications