IMD Weather Forecast: ಚಂಡಮಾರುತದ ಪರಿಚಲನೆ; ಈ ಭಾಗಗಳಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 4 ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮುಂದಿನ ಕೆಲವು ದಿನಗಳಲ್ಲಿ ದೇಶದ ಹಲವೆಡೆ ಭೀಕರ ಚಳಿ ನಡವೆಯೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು (ಜನವರಿ 17) ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ದಕ್ಷಿಣ ಭಾರತದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಹಿಮಾಚಲ ಪ್ರದೇಶ ಮತ್ತು ಪೂರ್ವ ರಾಜಸ್ಥಾನದ ಕೆಲವು ಭಾಗಗಳಲ್ಲಿ ದಟ್ಟ ಮಂಜಿನ ನಡುವೆಯೇ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ. ಜನವರಿ 18ರಿಂದ 20ರ ವರೆಗೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಜನವರಿ 17) ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಪಂಜಾಬ್ , ಹರಿಯಾಣ , ಚಂಡೀಗಢ , ಉತ್ತರ ಪ್ರದೇಶ , ಪೂರ್ವ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜನವರಿ 18-22ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ, ಜನವರಿ 21 ಮತ್ತು 22ರಂದು ಪಂಜಾಬ್, ಹರಿಯಾಣ , ಚಂಡೀಗಢ , ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ದಕ್ಷಿಣ ಭಾರತದ ಹವಾಮಾನದ ವಿವರ: ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ, ದಕ್ಷಿಣದ ಭಾರತದ ಹಲವು ರಾಜ್ಯಗಳಲ್ಲಿ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಜನವರಿ 18 ರಿಂದ 20ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಜನವರಿ 19 ಮತ್ತು 20ರಂದು ಕೇರಳದ ಹಲವೆಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಈ ತಿಂಗಳ ಕೊನೆಯಲ್ಲಿ ತಾಪಮಾನದಲ್ಲಿ ಬಾರಿ ಬದಲಾವಣೆಗಳನ್ನು ಕಾಣಬಹುದಾಗಿದೆ. ವಾಯುವ್ಯ ಭಾರತದಾದ್ಯಂತ ತಾಪಮಾನ ಪ್ರಮಾಣ ಕಡಿಮೆಯಾಗಲಿದ್ದು, ದಟ್ಟ ಮಂಜಿನ ಜೊತೆ ಶೀತದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರದ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನಿಂದ ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-3 °Cನಷ್ಟು ಕ್ರಮೇಣ ಇಳಿಕೆ ಆಗಲಿದ್ದು, ನಂತರ ಏರಿಕೆಯಾಗಲಿದೆ. ಗುಜರಾತ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಜನವರಿ 17ರಿಂದ 19ರ ವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯ ಬಹುತೇಕ ಭಾಗಗಳಲ್ಲಿ ದಟ್ಟ ಮಂಜಿನ ಜೊತೆ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟ ಮಂಜು ಕವಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications