ಕೊರೊನಾವೈರಸ್ 2ನೇ ಅಲೆ ಮುಗಿದಿಲ್ಲ; ಕೇಂದ್ರ ಸರ್ಕಾರದ ಮಾತಿನ ಹಿಂದಿನ ಮರ್ಮ!?
ನವದೆಹಲಿ, ಜುಲೈ 05: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಇನ್ನೂ ನಿಂತಿಲ್ಲ ಎಂದು ಕೇಂದ್ರ ಸರ್ಕಾರ ಪದೇ ಪದೆ ಎಚ್ಚರಿಕೆ ಸಂದೇಶ ನೀಡುತ್ತಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಇಳಿಕೆ ನಡುವೆಯೂ ಸರ್ಕಾರದ ಎಚ್ಚರಿಕೆಗೆ ಕಾರಣವೂ ಇದೆ.
ಇವತ್ತು ಜುಲೈ 5. ಇಂದಿನಿಂದ ಸರಿಯಾಗಿ ಎರಡು ತಿಂಗಳ ಹಿಂದೆಯಷ್ಟೇ ದೇಶದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದವು. 24 ಗಂಟೆಗಳಲ್ಲಿ 4.12 ಲಕ್ಷ ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಇಂದು ಈ ಅಂಕಿ-ಸಂಖ್ಯೆ 40,000 ಆಸುಪಾಸಿನಲ್ಲಿದೆ. ಕೊರೊನಾವೈರಸ್ ಎರಡನೇ ಅಲೆ ಹೆಚ್ಚಾಗಿದ್ದ ಸಮಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37.41 ಲಕ್ಷಕ್ಕೆ ಏರಿಕೆಯಾಗಿದ್ದು, ಇಂದು 4.77 ಲಕ್ಷ ಸಕ್ರಿಯ ಪ್ರಕರಣಗಳಿವೆ.
ದೇಶದ ಹಲವು ರಾಜ್ಯಗಳಲ್ಲಿ ಇಂದಿಗೂ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಎರಡು ದಿನಗಳ ಹಿಂದೆಯಷ್ಟೇ ನೀತಿ ಆಯೋಗದ ಸದಸ್ಯ ಡಾ.ವಿ ಕೆ ಪೌಲ್, "ಇಡೀ ದೇಶ ಸುರಕ್ಷಿತವಾಗವವರೆಗೂ ನಾವು ಸುರಕ್ಷಿತವಾಗಿದ್ದೇವೆ ಎಂದು ಭಾವಿಸುವಂತಿಲ್ಲ," ಎಂದಿದ್ದರು. ಈ ಹೇಳಿಕೆ ಹಿಂದಿನ ಮರ್ಮವೇನು?, ದೇಶದಲ್ಲಿ ಇಂದಿಗೂ ಎರಡನೇ ಅಲೆ ಅಂತ್ಯವಾಗಿಲ್ಲ ಎಂದು ಹೇಳುವುದಕ್ಕೆ ಕಾರಣವೇನು?ಎಂಬುದರ ಕುರಿತು ಒಂದು ವಿಶೇಷ ವರದಿಗಾಗಿ ಮುಂದೆ ಓದಿ...

ದೇಶದ ಆರು ರಾಜ್ಯಗಳಲ್ಲಿ ಕೊವಿಡ್-19 ಪ್ರಕರಣ
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 40,000 ಆಸುಪಾಸಿನಲ್ಲಿದ್ದರೂ, ದೇಶದ ಆರು ರಾಜ್ಯಗಳಲ್ಲಿ ಇಂದಿಗೂ ಅತಿಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕೇರಳ, ಒಡಿಶಾ, ಛತ್ತೀಸ್ ಗಢ, ಅರುಣಾಚಲ ಪ್ರದೇಶ, ತ್ರಿಪುರಾ ಮತ್ತು ಮಣಿಪುರದಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಒಂದು ವಾರ ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.3ರಷ್ಟಿದೆ. ಆದರೆ 71 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಾಗಿದೆ. ಕಳೆದ ಜೂನ್ 26ರಿಂದ ಜುಲೈ 2ರವರೆಗೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶೇ.13ರಷ್ಟು ಇಳಿಕೆಯಾಗಿದೆ. ಇಂದಿಗೂ 100 ಜಿಲ್ಲೆಗಳಲ್ಲಿ ಪ್ರತಿನಿತ್ಯ 100ಕ್ಕೂ ಹೆಚ್ಚು ಕೊರೊನಾವೈರಸ್ ಪ್ರಕರಣಗಳು ವರದಿಯಾಗುತ್ತಿವೆ.

ದೇಶದಲ್ಲಿ ಭಯ ಹುಟ್ಟಿಸಿದ ಡೆಲ್ಟಾ ಪ್ಲಸ್ ವೈರಸ್
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಡೆಲ್ಟಾ ರೂಪಾಂತರ ಹಾಗೂ ಇತ್ತೀಚಿನ ದಿನಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಹೆಚ್ಚು ಭಯವನ್ನು ಹುಟ್ಟಿಸುತ್ತಿದೆ. ಜೂನ್ 30ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 56 ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ. 12 ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, 56 ಎನ್ನುವುದು ಸ್ಪಷ್ಟ ಅಂಕಿ-ಅಂಶವಲ್ಲ. ಈ ಸಂಖ್ಯೆಗಿಂತಲೂ ಹೆಚ್ಚು ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ. ಆದರೆ ಎಲ್ಲ ಕೊರೊನಾವೈರಸ್ ಸೋಂಕಿತರ ಮಾದರಿಯನ್ನು ಪರೀಕ್ಷೆಗೊಳಪಡಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಡೆಲ್ಟಾ ಪ್ಲಸ್ ರೂಪಾಂತರದ ಸಂಖ್ಯೆಯನ್ನು ನಿಗದಿತವಾಗಿ ಹೇಳುವುದಕ್ಕೆ ಸಾಧ್ಯವಾಗುತ್ತಿಲ್ಲ.

ಕೊವಿಡ್-19 ಹರಡುವಿಕೆ ನಿಯಂತ್ರಿಸಲು ಮಾಡುವುದೇನು?
ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆ ಅಂತ್ಯವಾಗಿಲ್ಲ ಎನ್ನುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅತಿಹೆಚ್ಚು ಕೊವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಆರು ರಾಜ್ಯಗಳಿಗೆ ವೈದ್ಯಕೀಯ ತಜ್ಞರು, ಸಾರ್ವಜನಿಕ ಆರೋಗ್ಯ ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ಕಳುಹಿಸಿ ಕೊಡಲಾಗಿದೆ. ಆಯಾ ರಾಜ್ಯಗಳಲ್ಲಿ ಮಹಾಮಾರಿ ಹೆಚ್ಚಳಕ್ಕೆ ಕಾರಣವೇನು, ಕೊರೊನಾವೈರಸ್ ನಿಯಂತ್ರಣಕ್ಕೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಜ್ಞರ ಸಮಿತಿಯು ಸಲಹೆ ನೀಡಲಿದೆ. ಅಲ್ಲದೇ, ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಹಾಗೂ ಶೇ.60ಕ್ಕಿಂತ ಹೆಚ್ಚು ಸೋಂಕಿತರು ಆಸ್ಪತ್ರೆಗೆ ದಾಖಲಾಗಿರುವ ಜಿಲ್ಲೆಗಳನ್ನು ಗುರುತಿಸಿ ಆ ಬಗ್ಗೆ ಮಾಹಿತಿ ನೀಡುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಮೇಲೆ ಗಮನ
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸುವುದರ ಮೂಲಕ ಮಹಾಮಾರಿ ನಿಯಂತ್ರಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಗರ್ಭಿಣಿಯರಿಗೂ ಸಹ ಕೊವಿಡ್-19 ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

35.28 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 35,28,92,046 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 39,796 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 42,352 ಸೋಂಕಿತರು ಗುಣಮುಖರಾಗಿದ್ದರೆ, 723 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದ್ದು, 2,97,00,430 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ 4,02,728 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, 4,82,071 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications