ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ
ಕಲಬುರಗಿ, ಜುಲೈ 20; ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಿಹಿಸುದ್ದಿ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಹೊರಡಿಸಲಾದ ಆದೇಶಗಳನ್ನು ಅನುಷ್ಠಾನದ ಪ್ರಗತಿ ಪರಿಶೀಲನೆ ಮಾಡಲು ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿದೆ.
ಸರ್ಕಾರದ ಜಂಟಿ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಪುಟ ಉಪ ಸಮಿತಿಯ ಅಧ್ಯಕ್ಷರು.

ಆದೇಶದಲ್ಲಿ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿರುವವರ ಹೆಸರು ಹೀಗಿದೆ ಎಂದು ತಿಳಿಸಲಾಗಿದೆ.
ಸಂಪುಟ ಸಭೆಯ ನಿರ್ಣಯ; ದಿನಾಂಕ 13/07/2023ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯವನ್ನು ಉಲ್ಲೇಖ ಮಾಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ.
ಈ ಸಮಿತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷರು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ, ಹಜ್ ಸಚಿವ ರಹೀಂಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಾಲ್ಯಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಸದಸ್ಯರಾಗಿದ್ದಾರೆ.
ಯುವಜನ ಸೇವೆಗಳು, ಕ್ರೀಡೆಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್. ಎಸ್. ಬೋಸ್‌ರಾಜು ಸಹ ಸದಸ್ಯರಾಗಿದ್ದಾರೆ ಎಂದು ಆದೇಶ ಹೇಳಿದೆ.
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ನಿಯಮ 13 (5) ಹಾಗೂ ಸುತ್ತೋಲೆ ಸಂಖ್ಯೆ; ಡಿಸಿಎ (ಎಂ) 98/2001 ದಿನಾಂಕ 29/3/2001ರ ಪ್ರಕಾರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಈ ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಹಲವು ಭರವಸೆಗಳು; ಕಾಂಗ್ರೆಸ್ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳ ಜೊತೆಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತ್ತು. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತನ್ನು ಪ್ರಣಾಳಿಕೆಯಲ್ಲಿ ನೀಡಿತ್ತು.
ಪಕ್ಷದ ಪ್ರಣಾಳಿಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಪ್ರತಿ ವರ್ಷ 5 ಸಾವಿರ ಕೋಟಿ ನೀಡಲಾಗುತ್ತದೆ ಎಂದು ಭರವಸೆ ನೀಡಿತ್ತು. ಪಕ್ಷ ನೀಡಿದ್ದ ಭರವಸೆಗಳು ಹೀಗಿವೆ
* ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಜೀನ್ಸ್ ಬಟ್ಟೆಗಳ ರಾಷ್ಟ್ರೀಯ ಕೇಂದ್ರವಾಗುವಂತೆ ರೂ. 5000 ಕೋಟಿಯ ಹೂಡಿಕೆಯೊಂದಿಗೆ ಜವಳಿ ಪಾರ್ಕ್ ನಿರ್ಮಿಸಿ ಉದ್ಯೋಗವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದು.
*ಬೀದರ್‌ನಲ್ಲಿ ಐಐಟಿ ಮತ್ತು ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಹಾಕುವುದು.
* ಗ್ರಾಮ ಪಂಚಾಯತಿಗಳಿಗೆ ವರ್ಷಕ್ಕೆ ತಲಾ 1 ಕೋಟಿ ಅನುದಾನ
* ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 100 ಪಿಯುಸಿ ಮತ್ತು ಒಂದು ಮಹಿಳಾ ಪದವಿ ಕಾಲೇಜು ಸ್ಥಾಪನೆ ಮಾಡುವುದು
* ಪ್ರತಿ ಹೋಬಳಿಯಲ್ಲಿ ಒಂದೊಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸ್ಥಾಪನೆ ಮಾಡುವುದು
* ಎರಡು ವರ್ಷದೊಳಗೆ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗೂ ಖಾಲಿ ಇರುವ ಎಲ್ಲಾ ಶಿಕ್ಷಕ ಹುದ್ದೆಗಳ ಭರ್ತಿ ಮಾಡುವುದು
* ಕಲಬುರಗಿ-ಸಿರುಗುಪ್ಪ-ಬಳ್ಳಾರಿ ಹೆದ್ದಾರಿ ಷಟ್ಟಥವಾಗಿ ಅಗಲೀಕರಣಗೊಳಿಸುವುದು.












Click it and Unblock the Notifications