ಚುನಾವಣಾ ಕರ್ತವ್ಯ ಲೋಪ; ಸಿಬ್ಬಂದಿ ಅಮಾನತು ಮಾಡಿದ ಕಲಬುರಗಿ ಡಿಸಿ
ಕಲಬುರಗಿ, ಏಪ್ರಿಲ್ 14; ಕರ್ನಾಟಕದ 2023ರ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟಗೊಂಡಿದೆ. ಏಪ್ರಿಲ್ 14 ಮತ್ತು 16ರ ಸರ್ಕಾರಿ ರಜೆ ದಿನ ಹೊರತುಪಡಿಸಿ ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಗಳು ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಚುನಾವಣೆ ಕರ್ತವ್ಯದಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿತನ ಮತ್ತು ಉಡಾಫೆಯಿಂದ ವರ್ತಿಸಿ ಚುನಾವಣೆ ಕಾರ್ಯಕ್ಕೆ ತೊಂದರೆ ಉಂಟು ಮಾಡಿ ಕರ್ತವ್ಯಲೋಪವೆಸಗಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕಲಬುರಗಿಯ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಆಪ್ತ ಕಾರ್ಯದರ್ಶಿ ಮಹ್ಮದ್ ಮೀನಾಜುದ್ದಿನ ಅಮಾನತುಗೊಂಡಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಚುನಾವಣೆ ಕರ್ತವ್ಯದಲ್ಲಿನ ಬೇಜವಾಬ್ದಾರಿತನ ಮತ್ತು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 134 ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 28 (ಎ) ಮತ್ತು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957ರ ನಿಯಮ 10 (1) (ಡಿ)ರಂತೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಅಮಾನತು ಅವಧಿಯಲ್ಲಿ ಕಚೇರಿ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ. ಈ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು-1958ರ ನಿಯಮ 98ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ನೌಕರರು ಅರ್ಹರಿರುತ್ತಾರೆ ಎಂದು ಜಿಲ್ಲಾಚುನಾವಣಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಧಾರವಾಡದಲ್ಲಿಯೂ ಅಮಾನತು; ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಯಂತೆ ಕಾರ್ಯ ನಿರ್ವಹಣೆ ಮಾಡಬೇಕು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಚುನಾವಣಾ ಕರ್ತವ್ಯ ಲೋಪ ಎಸಗಿದರೆ ಚುನಾವಣಾಧಿಕಾರಿಗಳು ಶಿಸ್ತು ಕ್ರಮ ಕೈಗೊಂಡು ಅಮಾನತು ಮಾಡುವ ಅಧಿಕಾರ ಹೊಂದಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ ಡಿ. ಸೂರ್ಯವಂಶಿಯನ್ನು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ಕಾರ್ಯಲೋಪ ಮಾಡಿರುವುದರಿಂದ ತಕ್ಷಣ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದರು.
ನವೀನ್ ಸೂರ್ಯವಂಶಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಲ್ಲದೇ, ಸಕಾಲಕ್ಕೆ ಮಾಹಿತಿ, ದಾಖಲೆಗಳನ್ನು ನೀಡದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರು. ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134 ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಈ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿದ್ದು, ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡಬಾರದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶದಲ್ಲಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಆರಂಭ; ಮಾರ್ಚ್ 29ರಂದು ಕೇಂದ್ರ ಚುನಾವಣಾ ಆಯೋಗ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿತ್ತು. ಏಪ್ರಿಲ್ 13ರ ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರಗಳನ್ನು ಏಪ್ರಿಲ್ 20ರ ತನಕ ಸಲ್ಲಿಕೆ ಮಾಡಲು ಅವಕಾಶವಿದೆ.
ಏಪ್ರಿಲ್ 14 ಮತ್ತು 16ರಂದು ಸರ್ಕಾರಿ ರಜೆ ಇದೆ. ಆದ್ದರಿಂ ಅಂದು ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿಲ್ಲ. ಉಳಿದ ದಿನಗಳು ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಬಹುದು.












Click it and Unblock the Notifications