ಉದ್ಯೋಗ ಮೇಳ: ಸರ್ಕಾರ 1 ಲಕ್ಷಕ್ಕೂ ಹೆಚ್ಚಿನ ಉದ್ಯೋಗ ನೀಡಲಿದೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ, ಏಪ್ರಿಲ್ 16: ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ಕಲಬುರಗಿಯಲ್ಲಿ ಇಂದು ಬೃಹತ್ 'ಉದ್ಯೋಗ ಮೇಳ' ಆಯೋಜಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಅವಕಾಶಗಳು ಇಲ್ಲಿವೆ. ಕಲ್ಯಾಣ ಕರ್ನಾಟಕದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರ ಮೇಳ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.
ಇದಕ್ಕು ಮೊದಲು ಕಲಬುರಗಿ ಏರ್‌ಪೋರ್ಟ್‌ಗೆ ಬಂದಿಳಿದ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದ ಯುವಜನರ ಕೌಶಲ್ಯದ ಕೈಗಳಿಗೆ ಉದ್ಯೋಗದ ಬಲ ತುಂಬಲು ಇಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ರಾಜ್ಯದ ಪ್ರತಿಷ್ಠಿತ ವಿವಿಧ ಕಂಪನಿಗಳಲ್ಲಿ 1 ಲಕ್ಷಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಸದುಪಯೋಗ ಪಡೆಯಬೇಕೆಂದು ಮುಖ್ಯಮಂತ್ರಿಗಳು ಕೋರಿದರು.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜಿವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಜಂಟಿಯಾಗಿ ಜಿಲ್ಲೆಯಲ್ಲಿ ಉದ್ಯೋಗ ಮೇಳೆ ಆಯೋಜಿಸಲಾಗಿದೆ. ಸಕಲ ವ್ಯವಸ್ಥೆಗಳನ್ನು ಇಲ್ಲಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಘನ ಉಪಸ್ಥಿತಿ ಇತ್ತು.

ಜಾತಿ ಗಣತಿ ವರದಿ ನಿರ್ಧಾರ ನಾಳೆ..
ಗುರುವಾರ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಅವರು ಗುಡುಗಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸಿಎಂ ಪ್ರತಿಕ್ರಿಯೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ. ಇದೊಂದು ದ್ವೇಷ ರಾಜಕೀಯ ಎಂದು ಅವರು ಹರಿಹಾಯ್ದರು.












Click it and Unblock the Notifications