₹131 ಕೋಟಿ ವೆಚ್ಚದಲ್ಲಿ ಕರ್ನಾಟಕದ ಈ ಭಾಗದಲ್ಲಿ ಮಹತ್ವದ ಯೋಜನೆ ಜಾರಿ!
ಕರ್ನಾಟಕದಲ್ಲಿ ಪ್ರಮುಖ ಯೋಜನೆಯೊಂದು ಜಾರಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕದ ಈ ಭಾಗದಲ್ಲಿ ಸುಮಾರು 131 ಕೋಟಿ ರೂಪಾಯಿ ವೆಚ್ಚದಲ್ಲಿ ಮಹತ್ವದ ಯೋಜನೆಯೊಂದು ಜಾರಿಯಾಗುತ್ತಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ನಂತರ ಬೆಂಗಳೂರು ಸುತ್ತಮುತ್ತಲಿನ ಹಾಗೂ ಬಿಯಾಂಡ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ತುಮಕೂರು ಜಿಲ್ಲೆಯಲ್ಲಿ ಮಹತ್ವದ ಯೋಜನೆಯೊಂದು ಜಾರಿ ಆಗುತ್ತಿದ್ದು. ಈ ಯೋಜನೆಯನ್ನು ಜಾರಿ ಮಾಡುವುದರಿಂದಾಗಿ ಬಡವರು ಹಾಗೂ ಮಧ್ಯಮವರ್ಗದವರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿದೆ.

ತುಮಕೂರು ನಗರದಲ್ಲಿ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಹತ್ವದ ಸಭೆ ನಡೆಸಿದ್ದಾರೆ. ತುಮಕೂರು ನಗರದಲ್ಲಿರುವ ಜಿಲ್ಲಾಸ್ಪತ್ರೆಯ 78 ವರ್ಷಗಳ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ಸುಮಾರು 131 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಾಣದ ವಿವರವಾದ ಯೋಜನಾ ವರದಿ ತಯಾರಿಕೆ, ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಈ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡು ಶಂಕುಸ್ಥಾಪನೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ 100 ಹಾಸಿಗೆಗಳ ತುರ್ತು ನಿಗಾ ಘಟಕ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನೂ ಅದೇ ದಿನ ನೆರವೇರಿಸಬೇಕು.
ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನೂ ಒಂದೇ ದಿನ ನೆರವೇರಿಸಲು ಅನುವಾಗುವಂತೆ ಕಾರ್ಯ ಯೋಜನೆ ರೂಪಿಸುವಂತೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್ ಸಭೆಯಲ್ಲಿದ್ದರು.












Click it and Unblock the Notifications