ಗದಗದಲ್ಲಿ ಬಿಸಿಯೂಟ ಸೇವಿಸಿ 140 ಮಕ್ಕಳು ಅಸ್ವಸ್ಥ
ಗದಗ, ಮಾ.4 : ಗದಗ ಜಿಲ್ಲೆಯ ರೋಣ ತಾಲೂಕಿನ ಮಾರನ ಬಸರಿ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 140 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸೋಮವಾರ ಮಧ್ಯಾಹ್ನ ಶಾಲೆಯಲ್ಲಿ ನೀಡಿದ ಬಿಸಿಯೂಟ ಸೇವಿಸಿದ ನಂತರ, ಹಲವು ಮಕ್ಕಳು ಅಸ್ವಸ್ಥರಾಗಿದ್ದರು. ಸೋಮವಾರ ಸಂಜೆ 60 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ 60 ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಎಲ್ಲಾ ಮಕ್ಕಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. [ಬಿಸಿಯೂಟಕ್ಕೆ ಅಡಿಗಾಸ್ ಕೊಡುಗೆ]

ಶಾಲೆಯಲ್ಲಿ 350 ಮಕ್ಕಳಿದ್ದು ಇವರಲ್ಲಿ 140 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹುಳು ಬಿದ್ದ ಅಕ್ಕಿಯಲ್ಲಿ ಅನ್ನ ಮಾಡಿ ಮಕ್ಕಳಿಗೆ ಸೋಮವಾರ ಮಧ್ಯಾಹ್ನ ಊಟ ನೀಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಅಸ್ವಸ್ಥ ಮಕ್ಕಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಯಾವ ಅಧಿಕಾರಿಗಳು ಆಗಮಿಸಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. [ಬಿಸಿಯೂಟದ ಜೊತೆ ಚಪಾತಿ, ಪೂರಿ]
ಮಕ್ಕಳು ಸೇವಿಸಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದು, ಶಾಲಾ ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಯವರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ.












Click it and Unblock the Notifications