ರಾಜ್ಯದಲ್ಲಿ 15 ಸಾವಿರ ಅತಿಥಿ ಶಿಕ್ಷಕರ ನೇಮಕ: ಸದನದಲ್ಲಿ ಬಿ.ಸಿ. ನಾಗೇಶ್ ಸ್ಪಷ್ಟನೆ
ಬೆಂಗಳೂರು, ಮಾ. 10: ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಸಕ್ತ ಸಾಲಿನಲ್ಲಿ 15,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ. ರಾಜೀವ ಪರವಾಗಿ ಧುರ್ಯೋದನ ಐಹೊಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ ನಿಜ. ಸದ್ಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಾಗಿದೆ. ಮೇ. ನಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಅರ್ಹತಾ ಪರೀಕ್ಷೆ ನಡೆಯಲಿದೆ. ಆ ನಂತರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಗುಣವಾಗಿ 21 ಶಿಕ್ಷಕರ ಮಂಜೂರಾತಿ ಅಗತ್ಯವಿದ್ದರೂ, 13 ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯದಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಗಿಸಿ ಹೊಂದಾಣಿಕೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಇದೇ ವೇಳೆ ಹೇಳಿದ್ದಾರೆ.

2000 ಡಿ ಗ್ರೂಪ್ ಹುದ್ದೆ ನೇಮಕ:
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000 ಗ್ರೂಪ್ ಡಿ. ಹುದ್ದೆಗಳು ಖಾಲಿಯಿವೆ. ಸದ್ಯದಲ್ಲಿ ಭರ್ತಿಗೆ ಕ್ರಮ ವಹಿಸಲಾಗುವುದು. ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಡಿ ಗ್ರೂಪ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಹೀಗಾಗಿ ನಿಯಮಾನುಸಾರ ಟೆಂಡರ್ ಕರೆದು ನೇಮಕ ಪ್ರಕ್ರಿಯೆಗೆ ಚಾಲನೆ ಕೊಡಲಾಗುವುದು ಎಂದು ಬಿ.ಸಿ. ನಾಗೇಶ್ ಸದನದಲ್ಲಿ ಪ್ರಕಟಿಸಿದರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಯಟ್ ಸಂಸ್ಥೆಗೆ ಗರುವಡೆಯರಹಳ್ಳಿಯಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದ್ದು, ಬೇಗ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ವೀರಭದ್ರಯ್ಯ ಅವರ ಪ್ರಶ್ನೆಗೆ ಇದೇ ವೇಳೆ ಉತ್ತರಿಸಿದರು. ಕಟ್ಟಡ ನಿರ್ಮಾಣಕ್ಕೆ ಅಂದಾಜು ಪಟ್ಟಿ, ತಯಾರಿಸಲು ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಅಂದಾಜು ಪಟ್ಟಿ ಪಡೆದು ಅಯ್ಯವ್ಯಯದಲ್ಲಿ ಒದಗಿಸಿರುವ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಜರುಗಿಸಲಾಗವುದು ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.












Click it and Unblock the Notifications