ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಬಾಕಿ ಅನುದಾನ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ಕೇಂದ್ರಕ್ಕೆ ಪತ್ರ
ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಪ್ರಸ್ತುತ ಆಡಳಿತಾವಧಿ 2026ರ ಜನವರಿ-ಫೆಬ್ರವರಿ ತಿಂಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಈ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಪ್ರಮುಖ ಅಭಿವೃದ್ಧಿ ಕಾರ್ಯಗಳು ಅನುದಾನದ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ವ್ಯವಸ್ಥೆಯನ್ನು ಸದೃಢವಾಗಿ ಉಳಿಸಿಕೊಂಡು, ಅವುಗಳ ಅವಧಿ ಮುಗಿಯುವ ಮುನ್ನವೇ ಮೂಲಸೌಕರ್ಯ, ಕುಡಿಯುವ ನೀರು, ಒಳಚರಂಡಿ, ರಸ್ತೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಸೌಕರ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸುವುದು ಅತ್ಯವಶ್ಯಕವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಾದ 15ನೇ ಹಣಕಾಸು ಆಯೋಗದ ಅನುದಾನ ವಿಳಂಬವಾಗುತ್ತಿರುವುದರಿಂದ ಗ್ರಾಮೀಣ ಅಭಿವೃದ್ಧಿಗೆ ತೀವ್ರ ಹೊಡೆತ ಬೀಳುತ್ತಿದೆ ಎಂದು ಅವರು ಹೇಳಿದ್ದಾರೆ.

ಸಚಿವ ರಾಜೀವ್ ರಂಜನ್ ಸಿಂಗ್‌ಗೆ ಪತ್ರ
ಈ ಹಿನ್ನೆಲೆಯಲ್ಲಿ ಕೇಂದ್ರ ಪಂಚಾಯತ್ ರಾಜ್ ಸಚಿವರಾದ ರಾಜೀವ್ ರಂಜನ್ ಸಿಂಗ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಪತ್ರ ಬರೆದು, ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಪತ್ರದಲ್ಲಿ ಕರ್ನಾಟಕವು ದೇಶದಲ್ಲಿ ಗ್ರಾಮೀಣ ವಿಕೇಂದ್ರೀಕರಣ ಹಾಗೂ ಪಂಚಾಯತಿ ಆಡಳಿತದಲ್ಲಿ ಮಾದರಿ ರಾಜ್ಯವಾಗಿದ್ದು, ಪಂಚಾಯತಿ ಮಟ್ಟದಲ್ಲಿ ಪರಿಣಾಮಕಾರಿ ಆಡಳಿತ ವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿದೆ ಎಂದು ಉಲ್ಲೇಖಿಸಲಾಗಿದೆ.
ಪಂಚಾಯಿತಿಗಳ ಅವಧಿ ಮುಗಿಯುವ ಮುನ್ನವೇ ನಿರ್ಣಾಯಕ ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಲು ಸಕಾಲಿಕ ಅನುದಾನ ಬಿಡುಗಡೆ ಅತ್ಯಗತ್ಯ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಚಿವರು 2025-26ನೇ ಹಣಕಾಸು ವರ್ಷದ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ವಿಳಂಬದ ಕುರಿತು ಈಗಾಗಲೇ 2025ರ ಡಿಸೆಂಬರ್ 08ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ್ದಾರೆ.

ಅದರೊಂದಿಗೆ, 2025ರ ಆಗಸ್ಟ್ ತಿಂಗಳಲ್ಲೇ ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಾಮ ಪಂಚಾಯತಿ ಅಭಿವೃದ್ಧಿ ಯೋಜನೆಗಳನ್ನು (GPDP) ನಿಗದಿತ ಸಮಯದೊಳಗೆ ಅಪ್ಲೋಡ್ ಮಾಡಿರುವುದನ್ನು ಖಚಿತಪಡಿಸಿಕೊಂಡಿದ್ದು, ಅಗತ್ಯವಿರುವ ಅನುದಾನ ವರ್ಗಾವಣೆ ಪ್ರಮಾಣಪತ್ರಗಳನ್ನು 2025ರ ಜುಲೈ 8 ಮತ್ತು ಸೆಪ್ಟೆಂಬರ್ 24ರಂದು ಸಲ್ಲಿಸಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ಇಷ್ಟೆಲ್ಲ ಕ್ರಮಗಳನ್ನು ಪೂರ್ಣಗೊಳಿಸಿದ್ದರೂ ಸಹ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗದಿರುವುದು ಅಸಮಾಧಾನಕಾರಿ ಸಂಗತಿಯಾಗಿದ್ದು, ಇದರಿಂದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಕಾರ್ಯಾಚರಣೆಗಳು ಹಾಗೂ ಅಭಿವೃದ್ಧಿ ಯೋಜನೆಗಳು ತೀವ್ರವಾಗಿ ಪರಿಣಾಮಗೊಂಡಿವೆ ಎಂದು ಸಚಿವರು ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿ, ಗ್ರಾಮಸ್ಥರಿಗೆ ಮೂಲಭೂತ ಸೌಲಭ್ಯಗಳ ಒದಗಿಕೆ ಹಾಗೂ ಪಂಚಾಯತಿ ಮಟ್ಟದ ಆಡಳಿತವನ್ನು ಬಲಪಡಿಸುವ ದೃಷ್ಟಿಯಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು. ಇದರಿಂದ ಗ್ರಾಮಗಳ ಸಬಲೀಕರಣಕ್ಕೆ ಅಗತ್ಯ ಬೆಂಬಲ ದೊರೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.












Click it and Unblock the Notifications