ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ 2.7 ಲಕ್ಷ ವಿದ್ಯಾರ್ಥಿಗಳು
ಬೆಂಗಳೂರು, ಜೂನ್ 14: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯು ರಾಜ್ಯಾದ್ಯಂತ ಜೂನ್ 21ರಿಂದ ಪ್ರಾರಂಭಗೊಳ್ಳಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಪರೀಕ್ಷೆಯು ಜೂನ್ 28ರವರೆಗೆ ನಡೆಯಲಿದೆ.ಈ ಬಾರಿ ಒಟ್ಟು 1,32,543 ಬಾಲಕರು ಹಾಗೂ 73,370 ಬಾಲಕಿಯರು ಸೇರಿದಂತೆ ಒಟ್ಟು 2,07, 913 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 673 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 11 ಅತಿಸೂಕ್ಷ್ಮ, 17 ಸೂಕ್ಷ್ಮ ಮತ್ತು 645 ಸಾಮಾನ್ಯ ಪರೀಕ್ಷಾ ಕೇಂದ್ರಗಳಾಗಿವೆ.

ಜು.8ರಿಂದ ಮೌಲ್ಯಮಾಪನ: ಆಯ್ದ ಒಂಭತ್ತು ಜಿಲ್ಲೆಗಳಲ್ಲಿ ವಿಷಯವಾರು 54 ಮೌಲ್ಯಮಾಪನಾ ಕೇಂದ್ರಗಳಲ್ಲಿ ಜು.8ರಿಂದ 14ರವರೆಗೆ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕಾಗಿ ಒಟ್ಟು 18 ಸಾವಿರ ಶಿಕ್ಷಕರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸ್ಟೂಡೆಂಟ್ ಅಚೀವ್‌ಮೆಂಟ್ ಟ್ರ್ಯಾಕಿಂಗ್ ಸಿಸ್ಟಮ್ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದೆ.
ಹಾಗಾಗಿ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳ ಬಗ್ಗೆ ಆಯಾ ಶಾಲೆಗಳು ಕಳುಹಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಪ್ರವೇಶ ಪತ್ರಗಳನ್ನು ಅಪ್‌ಲೋಡ್ ಮಾಡಲಾಗಿದೆ. ಒಂದು ವೇಳೆ ತಪ್ಪುಗಳು ಕಂಡುಬಂದರೆ ಕೂಡಲೆ ಮಂಡಳಿಯ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.












Click it and Unblock the Notifications