ಬೆಂಗಳೂರು, ಬೆಳಗಾವಿಯಲ್ಲಿ 10 ದಿನದ ಅಧಿವೇಶನ
ಬೆಂಗಳೂರು, ಜೂ. 12 : ಈ ಬಾರಿಯ ಮಳೆಗಾಲದ ವಿಧಾನಸಭೆ ಅಧಿವೇಶನ ಎರಡು ಕಡೆ ನಡೆಯಲಿದೆ. ಬೆಳಗಾವಿಯಲ್ಲಿ 10 ಮತ್ತು ಬೆಂಗಳೂರಿನಲ್ಲಿ 10 ದಿನಗಳ ಅಧಿವೇಶನವನ್ನು ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ರಾಜ್ಯದ ಆಡಳಿತ ಶಕ್ತಿ ಕೇಂದ್ರ ಕುಂದಾ ನಗರಿ ಕಡೆ ಮುಖ ಮಾಡಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಮಳೆಗಾಲದ ಅಧಿವೇಶನವನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಒಟ್ಟು 20 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಜೂನ್ 29ರಿಂದ ಜುಲೈ 10 ರವರೆಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮತ್ತು ಜುಲೈ 13 ರಿಂದ 24 ರವರೆಗೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. [ಬೆಳಗಾವಿ ಸುವರ್ಣ ವಿಧಾನ ಸೌಧ ಕಟ್ಟಿದ್ದು ಏಕೆ?]
ಒಟ್ಟು 20 ದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ ಚಳಿಗಾಲದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತಿತ್ತು, ಈ ಬಾರಿ ಮಳೆಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲಾಗುತ್ತಿದೆ.ಇದರಲ್ಲಿ ವಿಶೇಷವೇನೂ ಇಲ್ಲ ಎಂದರು. [ಬೆಳಗಾವಿ ಅಧಿವೇಶನ ಹೋರಾಟಗಳ ಕರ್ಮಭೂಮಿ!]
ಸಂಪುಟ ಸಭೆಯ ಇತರ ತೀರ್ಮಾನಗಳು
* ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲು ಒಪ್ಪಿಗೆ
* ಹೈ-ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಬೀದರ್ ನಗರದಲ್ಲಿ ವರ್ತುಲ ರಸ್ತೆ ನಿರ್ಮಾಣ.
* ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷರಾಗಿ ಹೈಕೋರ್ಟ್ ನಿವೃತ್ತ ನ್ಯಾ. ಕೆ. ಭಕ್ತವತ್ಸಲಂ ಅವರನ್ನು ನೇಮಿಸಲು ರಾಷ್ಟ್ರಪತಿಗಳಿಗೆ ಶಿಫಾರಸು.
* ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ 50 ಎಕರೆ ವಿಸ್ತೀರ್ಣದಲ್ಲಿ 410 ಕೋಟಿ ವೆಚ್ಚದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಸಮ್ಮೇಳನ ಕೇಂದ್ರ ಸ್ಥಾಪಿಸಲು ಒಪ್ಪಿಗೆ.












Click it and Unblock the Notifications