280000 ಸರ್ಕಾರಿ ಹುದ್ದೆಗಳು ಖಾಲಿ: ಹೊಸ ನೇಮಕಾತಿಯ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು ?
ರಾಜ್ಯದಲ್ಲಿ ಸರ್ಕಾರಿ ನೌಕರರ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚು ಚರ್ಚೆ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಸುಮಾರು 280000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಅದನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕಾಗಿದ್ದ ಸರ್ಕಾರ ಮಾಡುತ್ತಿಲ್ಲ ಎನ್ನುವ ಅಂಶ ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಸುಮಾರು 280000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಅದನ್ನು ಭರ್ತಿ ಮಾಡುವ ಬದಲು ಕೇವಲ 24300 ಹುದ್ದೆಗಳನ್ನು ಭರ್ತಿ ಮಾಡಲು ಮಾತ್ರ ಆರ್ಥಿಕವಾಗಿ ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದ್ದಾರೆ. ಅಂದರೆ ಖಾಲಿ ಇರುವ 9 % ರಷ್ಟು ಮಾತ್ರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಕ್ಕೆ ಮಾತ್ರ ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ಅರ್ಹ ಯುವಕ ಯುವತಿಯರಿಗೆ ಉದ್ಯೋಗ ನೀಡಬೇಕಾಗಿದ್ದ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ತನ್ನ ಹಣವನ್ನೆಲ್ಲ ಬಳಸಿ ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೊಂದರಲ್ಲೇ 79694 ಹುದ್ದೆಗಳು ಖಾಲಿ ಇರುವುದು ಉಲ್ಲೇಖಾರ್ಹ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಉದ್ಯೋಗಾಂಕ್ಷಿಗಳ ವಯೋಮಿತಿ ಮೀರುತ್ತಿದ್ದರೆ ಇನ್ನೊಂದು ಕಡೆ ಸರ್ಕಾರದ ವಿಳಂಬ ಧೋರಣೆಯಿಂದ, ಕರ್ನಾಟಕ ಲೋ(ಪ)ಕ ಸೇವಾ ಆಯೋಗ ಎಂಬ ಭ್ರಷ್ಟ ನೇಮಕಾತಿ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಅವರು ಹೇಳಿದ್ದಾರೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಅವೈಜ್ಞಾನಿಕ ಯೋಜನೆಗಳನ್ನು ನಿಲ್ಲಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಂಡು ಆಡಳಿತಕ್ಕೆ ಚುರುಕು ನೀಡಬೇಕು ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದಿಂದ ಸುಳ್ಳು ಮಾಹಿತಿ!
ಇನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚಿಸುವ ವೇಳೆ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂಬೆಲ್ಲಾ ಸುಳ್ಳು ಹೇಳಿದ್ದಾರೆ. ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ನಷ್ಟ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟರೂ ಕೂಡ ಅವರಿಂದ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. ನಾವು ₹2,245 ಕೋಟಿ ರೈತರಿಗೆ ಪರಿಹಾರ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ನಡೆಯುತ್ತಿರುವ ಉತ್ತರ ಕರ್ನಾಟಕ ಭಾಗದ ವಿಷಯಗಳ ಮೇಲಿನ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು. ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ, ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು.
ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಇತರರು ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ಸದನದ ಗೌರವ ಕಾಪಾಡುವ ಹೊಣೆ ಎಲ್ಲರದ್ದಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications