ಮಾರ್ಚ್ 1ರಿಂದ ದ್ವಿತೀಯ ಪಿಯು ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ಖಡಕ್ ರೂಲ್ಸ್
ಬೆಂಗಳೂರು, ಫೆಬ್ರವರಿ 23: ಫೆಬ್ರವರಿ ತಿಂಗಳು ಮುಗಿಯುತ್ತಾ ಬಂದಿದ್ದು, ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗಲಿವೆ. ದಿನಾಂಕ 01.03.2025 ರಿಂದ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು, ದಿನಾಂಕ 21.03.2025 ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ತನಕ ನಡೆಯಲಿವೆ. ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಿಲ್ಲಾಮಟ್ಟದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು, ಪರೀಕ್ಷಾ ಕ್ಷೇಂದ್ರದ ಮಾಹಿತಿಯನ್ನು ಅಧಿಕಾರಿಗಳ ಮಟ್ಟದಲ್ಲಿ ಹಂಚಿಕೊಂಡು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುತ್ತಿದೆ.
ಪರೀಕ್ಷಾ ಕೇಂದ್ರದ ಸುತ್ತ ಖಡಕ್ ರೂಲ್ಸ್: ಈಗಾಗಲೇ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವೇಳಾಪಟ್ಟಿಯ ಅನ್ವಯ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ರವರೆಗೆ ನಡೆಯಲಿವೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಒದಗಿಸಬೇಕಾದ ಸೌಲಭ್ಯಗಳ ಕುರಿತು ಈಗಾಗಲೇ ಸೂಚನೆಗಳನ್ನು ನೀಡಲಾಗುತ್ತಿದೆ.
ಪ್ರಶ್ನೆ ಪತ್ರಿಕೆಯನ್ನು ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.
ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುತ್ತದೆ. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಅಲ್ಲಿ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ಕೊಡಲಾಗಿದೆ. ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಅಧಿಕಾರಿ/ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗುತ್ತಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಗೆ ಪರೀಕ್ಷಾ ಕೇಂದ್ರಗಳಿಗೂ ನಿಯೋಜನೆಗೊಂಡಿದ್ದಾರೆ. ಆದ್ದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿ ಆದೇಶವನ್ನು ಹೊರಡಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಅಲ್ಲದೇ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ.












Click it and Unblock the Notifications