ಏ. 29ರಿಂದ ಪಿಯುಸಿ-2ನೇ ಪರೀಕ್ಷೆ; ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರಡಿಸಿದೆ. ಏಪ್ರಿಲ್ 29ರಿಂದ ಪರೀಕ್ಷೆಗಳು ಆರಂಭವಾಗಲಿವೆ.
ಈ ಕುರಿತು ಕೆಎಸ್ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಈ ಆದೇಶ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಈ ಆದೇಶಕ್ಕೆ ಅಧ್ಯಕ್ಷರು, ಕನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವರ ಪತ್ರ. ಸುತ್ತೋಲೆ ಸಂಖ್ಯೆ ದಿನಾಂಕ 21/02/2024, ಸೂಕ್ತಾಧಿಕಾರಿಗಳ ಆದೇಶ ದಿನಾಂಕ 24/04/2024 ಉಲ್ಲೇಖ ಮಾಡಲಾಗಿದೆ.
ಆದೇಶದ ವಿವರ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 29/04/2024 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವರು ಕೋರಿರುತ್ತಾರೆ ಎಂದು ಹೇಳಿದೆ.
ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 29/04/2024 ರಿಂದ 16/05/2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.
ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.
ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1 ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಸಹ ಪ್ರಕಟವಾಗಿದೆ. ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಫಲಿತಾಂಶ ಉನ್ನತೀಕರಣ ಬಯಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ.
ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
ಇವರಲ್ಲಿ ಫಲಿತಾಂಶ ಉನ್ನತೀಕರಣಕ್ಕಾಗಿ 32,848 ವಿದ್ಯಾರ್ಥಿಗಳು, 27,092 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ರಾಜ್ಯದ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.












Click it and Unblock the Notifications